ADVERTISEMENT

ಬೀದರ್‌ | 'ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯಲಿ'

ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನಾ ರ್‍ಯಾಲಿ–ಅಹೋರಾತ್ರಿ ಧರಣಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 5:38 IST
Last Updated 13 ಆಗಸ್ಟ್ 2025, 5:38 IST
ಆಶಾ ಕಾರ್ಯಕರ್ತೆಯರು ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು
ಆಶಾ ಕಾರ್ಯಕರ್ತೆಯರು ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು   

ಬೀದರ್‌: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವಂತೆ ರಾಜ್ಯ ಹಾಗೂ ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ₹10 ಸಾವಿರ ಗೌರವ ಧನ ಏಪ್ರಿಲ್‌ನಿಂದ ಅನ್ವಯವಾಗುವಂತೆ ಜಾರಿಗೆ ತಂದು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ‘ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯರ್‌ ಸೆಂಟರ್‌’ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದ ಪ್ರವಾಸಿ ಮಂದಿರದಲ್ಲಿ ಸೇರಿದ ನೂರಾರು ಆಶಾ ಕಾರ್ಯಕರ್ತೆಯರು, ಭಗತ್‌ ಸಿಂಗ್‌ ವೃತ್ತ, ಬಸವೇಶ್ವರ ವೃತ್ತದ ಪ್ರತಿಭಟನಾ ರ್‍ಯಾಲಿ ನಡೆಸಿ, ಮೂಲ ಸ್ಥಳ ತಲುಪಿದರು. 

ಮಾರ್ಗದುದ್ದಕ್ಕೂ ಭಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತ, ಘೋಷಣೆಗಳನ್ನು ಕೂಗುತ್ತ ಹೆಜ್ಜೆ ಹಾಕಿದರು. ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು. ಅಂಬೇಡ್ಕರ್‌ ವೃತ್ತದಲ್ಲಿ ಮೂರು ದಿನಗಳ ಅಹೋರಾತ್ರಿ ಧರಣಿ ಆರಂಭಿಸಿದರು. 

ADVERTISEMENT

ಜನವರಿಯಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಧರಣಿ ನಡೆಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಗೌರವ ಧನ ಹಾಗೂ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ₹10 ಸಾವಿರ ಗೌರವಧನದ ಗ್ಯಾರಂಟಿ ಮಾಡುತ್ತೇವೆ ಎಂದು ಆಶ್ವಾಸನೆ ಕೊಟ್ಟಿದ್ದರು. ಅದರ ಪ್ರಕಾರ ಈಗ ಅವರು ನುಡೆದಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಯವರು ಭರವಸೆ ಕೊಟ್ಟು ಏಳು ತಿಂಗಳಾದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಗಲಿರುಳು ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರನ್ನು ಈ ರೀತಿ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ ಎಂದರು. 

ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಕನಿಷ್ಠ ವೇತನ, ಪಿಎಫ್‌, ಇಎಸ್‌ಐ, ಗ್ರ್ಯಾಚುಟಿ ಸೇರಿದಂತೆ ಇತರೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತರಬೇಕು. ಸಾಂವಿಧಾನಿಕ ಸಂಸ್ಥೆಗಳು ಮಾಡಿರುವ ಶಿಫಾರಸು ಜಾರಿಗೆ ತರಬೇಕು. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿರುವಂತೆ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನವೂ ಹೆಚ್ಚಿಸಬೇಕು. ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆ ಕುರಿತ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಅದೇ ಹುದ್ದೆಯಲ್ಲಿ ಮುಂದುವರೆಸಬೇಕು. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಇಡಿಗಂಟು ನೀಡಬೇಕು. ನಗರ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ₹2 ಸಾವಿರ ಗೌರವ ಧನ ಹೆಚ್ಚಿಸಬೇಕು. ಜೂನ್‌–ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನ ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಹಕ್ಕೊತ್ತಾಯ ಮಾಡಿ, ಮನವಿ ಪತ್ರ ಸಲ್ಲಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷೆ ಮಹಾದೇವಿ, ಜಿಲ್ಲಾ ಕಾರ್ಯದರ್ಶಿ ಮೇರಿ, ಉಪಾಧ್ಯಕ್ಷರಾದ ರುಕ್ಮಿಣಿ, ರತ್ನಮ್ಮ, ದೇವಿಕಾ, ಗೋದಾವರಿ, ಜಯಾ, ಸುಶೀಲಮ್ಮ, ಜಂಟಿ ಕಾರ್ಯದರ್ಶಿಗಳಾದ ಸುವರ್ಣ, ಶೀಲಾ, ಶಾಂತಮ್ಮ, ಜ್ಯೋತಿ, ಲಕ್ಷ್ಮೀ, ಸಂಗೀತಾ, ಶಾಂಭವಿ, ಸುಜಾತ, ಕಚೇರಿ ಕಾರ್ಯದರ್ಶಿ ರೂತ್‌ ಮತ್ತಿತರರು ಪಾಲ್ಗೊಂಡಿದ್ದರು. 

‘ಕೋವಿಡ್‌ನಲ್ಲಿ ಮಾಡಿದ ಕೆಲಸ ಮರೆತು ಹೋಯಿತೇ’ ‘ಕೋವಿಡ್‌ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಕೋವಿಡ್‌ ಆದವರಿಗೆ ಅದರಿಂದ ಮೃತಪಟ್ಟವರ ಹತ್ತಿರ ಹೋಗಲು ಸಂಬಂಧಿಕರು ಹೆದರುತ್ತಿದ್ದರು. ಅಂತಹ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತೆಯರು ಗಟ್ಟಿಯಾಗಿ ನಿಂತು ಕೆಲಸ ಮಾಡಿದ್ದಾರೆ. ಕೆಲವರು ಜೀವ ಸಹ ಕಳೆದುಕೊಂಡಿದ್ದಾರೆ. ಕೋವಿಡ್‌ನಲ್ಲಿ ಮಾಡಿದ ಕೆಲಸ ಮರೆತು ಹೋಯಿತೇ’ ಎಂದು ಆಶಾ ಕಾರ್ಯಕರ್ತೆಯರು ಪ್ರಶ್ನಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.