ಬೀದರ್: ‘ನಗರದ ಮಧ್ಯ ಭಾಗದಲ್ಲಿ ಗುಂಡಿನ ದಾಳಿ ನಡೆಸಿ, ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಕೇಂದ್ರದ ಮಾಜಿಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಒತ್ತಾಯಿಸಿದರು.
ಬೀದರ್ ಜಿಲ್ಲೆಯಲ್ಲಿ ಬಡವರ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ. ಇಸ್ಪೀಟ್ ಅಡ್ಡೆಗಳು ತಲೆ ಎತ್ತಿವೆ. ವೇಶ್ಯಾವಾಟಿಕೆ ಆರಂಭವಾಗಿದೆ. ಇದು ಮಾನವೀಯ ಸಮಾಜ. ತಲೆ ತಗ್ಗಿಸುವ ಕೆಲಸಗಳು ಆರಂಭಗೊಂಡಿವೆ. ಬಸವಣ್ಣನವರ ಅನುಯಾಯಿ ಎಂದು ಹೇಳಿಕೊಳ್ಳುವ ಉಸ್ತುವಾರಿ ಸಚಿವರು ಈ ಎಲ್ಲ ಅನೈತಿಕ ಚಟುವಟಿಕೆಗಳನ್ನು ನಿಲ್ಲಿಸಬೇಕಾಗಿದೆ. ಕೆಲವು ಅಪರಾಧಿಗಳನ್ನು ರಕ್ಷಿಸುತ್ತಿರುವ ಸಚಿವರು ಜನರ ನಿರೀಕ್ಷೆಗಳನ್ನು ಹುಸಿಗೊಳಿಸುತ್ತಿದ್ದಾರೆ. ಅಹಂಕಾರವನ್ನು ಬದಿಗಿಟ್ಟು ಜಿಲ್ಲೆಯ ಜನತೆಯ ಹಿತಾಸಕ್ತಿ ಮತ್ತು ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ವಹಿಸಬೇಕು ಎಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಸಲಹೆ ಮಾಡಿದರು.
ದುಷ್ಕರ್ಮಿಗಳ ಗುಂಡಿನ ದಾಳಿಗೆ ಎಟಿಎಂಗಳಿಗೆ ಹಣ ತುಂಬುವ ಸಿಎಂಎಸ್ ಕಂಪನಿಯ ನೌಕರ ಗಿರಿ ವೆಂಕಟೇಶ ಸಾವನ್ನಪ್ಪಿರುವುದು ದುರದೃಷ್ಟಕರ. ಈ ಘಟನೆ ನಡೆದದ್ದು ಖಂಡನಾರ್ಹ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ಹಾಡಹಗಲೇ ಬೀದರ್‌ನಲ್ಲಿ ಎಟಿಎಂ ಹಣ ದರೋಡೆ ಮಾಡಿ, ಒಬ್ಬ ವ್ಯಕ್ತಿಯನ್ನು ಕೊಂದು ಪರಾರಿಯಾಗಿರುವುದರಿಂದ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ. ಗೃಹಸಚಿವರು ರಾಜ್ಯದಲ್ಲಿ ಇದ್ದಾರೋ ಇಲ್ಲವೋ ಎಂಬುದು ಅನುಮಾನದಿಂದ ನೋಡುವಂತಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸ್ ಇಲಾಖೆ ಅಪರಾಧಗಳನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಬಿಜೆಪಿ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಬಿಜೆಪಿ ಮುಖಂಡರಾದ ಬಾಬು ವಾಲಿ, ಶಶಿಧರ ಹೊಸಳ್ಳಿ, ಗುರುನಾಥ ಜ್ಯಾಂತಿಕರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.