ಬೀದರ್: ಕೇಂದ್ರ ಸರ್ಕಾರದ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ಬಂದು ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.
ಸಂವಿಧಾನದ ಕಲಂ 16 ರ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ನೀಡಲಾದ ಸರ್ಕಾರಿ ಹುದ್ದೆಗಳ ನೇರ ನೇಮಕಾತಿ ಹಾಗೂ ಬಡ್ತಿ ಮೀಸಲಾತಿಯನ್ನು ಸಂರಕ್ಷಣೆ ಮಾಡುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.
ಸರ್ಕಾರಿ ಹುದ್ದೆಗಳ ನೇರ ನೇಮಕಾತಿ ಮತ್ತು ಬಡ್ತಿ ಮೀಸಲಾತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರೀಕೋರ್ಟ್ ತೀರ್ಪು ನೀಡಿದೆ. ಈ ವಿಷಯದಲ್ಲಿ ಸಮರ್ಥವಾದ ಮಂಡಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಹಿತ ರಕ್ಷಣೆಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೊಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಕಾರ್ಯದರ್ಶಿ ಪರ್ವೇಜ್ ಕಮಲ್, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಮುಖಂಡರಾದ ಆನಂದ ದೇವಪ್ಪ, ಸಂಜಯ ಜಾಗೀರದಾರ, ಇರ್ಷಾದ್ ಪೈಲ್ವಾನ್, ರುಕ್ಮಾರೆಡ್ಡಿ ಪಾಟೀಲ, ವೆಂಕಟರಾವ್ ಶಿಂದೆ, ಚಂದ್ರಕಾಂತ ಹಿಪ್ಪಳಗಾಂವ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.