ಕಮಲನಗರ: ತಾಲ್ಲೂಕಿನ ಡಿಗ್ಗಿ ಗ್ರಾಮದ ಅಂಗನವಾಡಿ ಕೇಂದ್ರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿದರು.
ಅಂಗನವಾಡಿ ಶುಚಿತ್ವ, ಆಹಾರದ ಗುಣಮಟ್ಟ, ಮಕ್ಕಳ ಹಾಜರಾತಿ ಪರಿಶೀಲಿಸಿದರು. ನಂತರ ಮಕ್ಕಳೊಂದಿಗೆ ಸಂವಹನ ನಡೆಸಿದರು. ಪುಟಾಣಿ ಮಕ್ಕಳನ್ನು ಅಪ್ಪಿಕೊಂಡು ಮುದ್ದಾಡಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ‘ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಒತ್ತು ನೀಡಬೇಕು. ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಬೇಕು’ ಎಂದು ಸರ್ಕಾರಿ ಶಾಲಾ ಶಿಕ್ಷಕರಿಗೆ ಸೂಚಿಸಿದರು.
‘ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಲು ಹಿಂಜರಿಯುತ್ತಿದ್ದಾರೆ. ಕೂಡಲೇ ಕಾಯಂ ಶಿಕ್ಷಕರನ್ನು ನೇಮಿಸಬೇಕು’ ಎಂದು ಸುಭಾಷ ಚಂದ್ರಭೋಸ್ ಅಭಿವೃದ್ಧಿ ಸಂಘದ ಅಧ್ಯಕ್ಷ ಸಂಗಮನಾಥ ಬಿರಾದಾರ ಮನವಿ ಮಾಡಿದರು.
ಈ ಕುರಿತು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.
ಶಿಶು ಅಭಿವೃದ್ಧಿ ಅಧಿಕಾರಿ ಇಮಲಪ್ಪ ಡಿ.ಕೆ., ತಹಶೀಲ್ದಾರ್ ಅಮೀತಕುಮಾರ ಕುಲಕರ್ಣಿ, ಅಂಗನವಾಡಿ ಕಾರ್ಯಕರ್ತೆ ಸವಿತಾ ಯುವರಾಜ ರಾಂಪೂರೆ ಹಾಗೂ ಶಿಕ್ಷಕರು, ಮಕ್ಕಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.