ADVERTISEMENT

ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಿ, ಸೋಂಕು ನಿಯಂತ್ರಿಸಿ

ಅಧಿಕಾರಿಗಳಿಗೆ ಸಂಸದ ಭಗವಂತ ಖೂಬಾ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 15:36 IST
Last Updated 30 ಮಾರ್ಚ್ 2020, 15:36 IST
ಬೀದರ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಭಗವಂತ ಖೂಬಾ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು
ಬೀದರ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಭಗವಂತ ಖೂಬಾ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು   

ಬೀದರ್‌: ‘ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ದಿಸೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಿ, ನಿಯಂತ್ರಿಸಬೇಕು’ ಎಂದು ಸಂಸದ ಭಗವಂತ ಖೂಬಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರೋನಾ ಜಾಗೃತಿ ಸಮಿತಿ ಹಾಗೂ ಜಿಲ್ಲಾಮಟ್ಟದ ವೈದ್ಯಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

‘ಬಿಸಿಲು ಹೆಚ್ಚುತ್ತಿರುವ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ನೀರಿನ ಸಮಸ್ಯೆಯಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ವಿದೇಶದಿಂದ ಬರುತ್ತಿರುವ ವ್ಯಕ್ತಿಗಳಿಂದ ಸೋಂಕು ಹರಡುತ್ತಿದೆ. ಅಂತವರ ಮೇಲೆ ತೀವ್ರ ನಿಗಾ ಇಡಬೇಕು’ ಎಂದು ತಿಳಿಸಿದರು.

ADVERTISEMENT

‘ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆಯಾಗಬಾರದು ಮತ್ತು ವೈದ್ಯಕೀಯ ಕಿಟ್‌ಗಳು, ಸ್ಯಾನಿಟೈಜರ್ ಮತ್ತು ಮಾಸ್ಕ್‌ಗಳ ಕೊರತೆ ಕಂಡುಬಂದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕೂಡಲೇ ಸರಬರಾಜು ಮಾಡಲು ಕ್ರಮವಹಿಸಲಾಗುವುದು’ ಎಂದರು.

‘ಜಿಲ್ಲೆಯಲ್ಲಿ ತರಕಾರಿ, ದಿನಸಿ, ಹಣ್ಣಿನ ಅಂಗಡಿಗಳಿಗೆ ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ರೈತರಿಗೆ ಕೃಷಿ, ತೋಟಗಾರಿಕಾ ಸಾಮಗ್ರಿಗೆ ಮತ್ತು ರಸಗೊಬ್ಬರ ವಿತರಣೆಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ, ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ, ಜಿಲ್ಲಾ ಕಣ್ಗಾವಲು ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಕೃಷ್ಣಾರೆಡ್ಡಿ, ನಗರಸಭೆ, ಆಹಾರ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.