ಬೀದರ್: ‘ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಆಗಿರುವ ಹಾನಿಯ ಬಗ್ಗೆ ಎರಡು ವಾರದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಮಳೆಯಿಂದಾಗಿರುವ ಹಾನಿಯ ಪರಾಮರ್ಶೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಔರಾದ್ ಮತ್ತು ಕಮಲನಗರ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಬೆಳೆ, ಮನೆ, ರಸ್ತೆ, ಸೇತುವೆ, ಕೆರೆಕಟ್ಟೆ ಮುಂತಾದವುಗಳು ಹಾನಿಗೊಳಗಾಗಿ ಬಹಳ ನಷ್ಟ ಉಂಟಾಗಿದೆ. ರೈತರ ಹೊಲಗಳ ಮಣ್ಣು ಕೊಚ್ಚಿ ಹೋಗಿ, ಕೃಷಿಗೆ ಫಲವತ್ತಾದ ಮಣ್ಣು ಇಲ್ಲದಂತಾಗಿದೆ ಎಂದರು.
ಜಿಲ್ಲೆಯಲ್ಲಿ ಮಳೆಯಿಂದಾಗಿ ಮನೆ, ಸೇತುವೆ, ಬೆಳೆ ಹಾಳಾಗಿದೆ. ಅನೇಕ ಕಡೆಗಳಲ್ಲಿ ಪುನರ್ ನಿರ್ಮಾಣ ಕಾಮಗಾರಿ ಚಾಲ್ತಿಯಲ್ಲಿದೆ. ಕೆಲವೆಡೆ ರಸ್ತೆ ಮತ್ತು ಸೇತುವೆಗಳನ್ನು ತಕ್ಷಣ ಪುನರ್ ನಿರ್ಮಾಣ ಮಾಡಲಾಗಿದೆ. ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆ ನಡೆಸಿ, ಪರಿಹಾರ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಎಲ್ಲಾ ಕಡೆ ಸಂಚರಿಸಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಔರಾದ್ ಮತ್ತು ಕಮಲನಗರ ತಾಲ್ಲೂಕಿನಲ್ಲಿ ರಸ್ತೆಗಳನ್ನು ಸುಧಾರಿಸಬೇಕು. ಬಸ್ ಸಂಚಾರ ಹೆಚ್ಚಿಸಬೇಕು ಎಂದು ಸೂಚಿಸಿದರು.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಷ್ ರೆಡ್ಡಿ, ಪ್ರೋಬೆಷನರಿ ಐಎಎಸ್ ಅಧಿಕಾರಿ ರಮ್ಯಾ, ಬೀದರ್ ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ಬಸವಕಲ್ಯಾಣ ಉಪವಿಭಾಗಾಧಿಕಾರಿ ಮುಕುಲ್ ಜೈನ್, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.