
ಬೀದರ್: ಕಬ್ಬಿನ ಬೆಲೆ ನಿಗದಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಕಬ್ಬು ಬೆಳೆಗಾರರ ನಡುವೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಮೂರನೇ ಸಭೆಯೂ ಯಾವುದೇ ಅಂತಿಮ ನಿರ್ಧಾರಕ್ಕೆ ಬರದೇ ಕೊನೆಗೊಂಡಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹2,800 ನೀಡಲು ಒಪ್ಪಿಕೊಂಡಿವೆ. ಆರು ತಿಂಗಳ ನಂತರ ₹50 ಹೆಚ್ಚುವರಿ ಕೊಡುತ್ತವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ₹50 ಹೆಚ್ಚುವರಿ ಘೋಷಿಸಿದ್ದಾರೆ. ಎಲ್ಲಾ ಸೇರಿ ಒಟ್ಟು ₹2,900 ಪ್ರತಿ ಟನ್‌ಗೆ ಕೊಡಲಾಗುವುದು ಎಂದು ಹೇಳಿದರು.
ಆದರೆ, ಕಬ್ಬು ಬೆಳೆಗಾರರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಈ ಹಿಂದಿನ ಸಭೆಗಳಲ್ಲಿಯೇ ನಮ್ಮ ಬೇಡಿಕೆ ತಿಳಿಸಿದ್ದೇವು. ಆದರೆ, ಪುನಃ ಅದೇ ಮಾತು ಹೇಳುತ್ತಿದ್ದೀರಿ. ಇದು ನಮಗೆ ಒಪ್ಪಿಗೆಯಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ನಡೆಸಲಾಗುವುದು ಎಂದು ಹೇಳಿ ಸಭೆಯಿಂದ ಹೊರನಡೆದರು.
ಬಳಿಕ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿವಿಧ ಕಡೆಗಳಿಂದ ರೈತರು ಆಗಮಿಸಿದ್ದರು.
ಪ್ರತಿ ಟನ್ ಕಬ್ಬಿಗೆ ₹3,300 ಕೊಡಬೇಕೆಂಬುದು ನಮ್ಮ ಬೇಡಿಕೆಯಾಗಿತ್ತು. ಆದರೆ, ಕನಿಷ್ಠ ₹3,100 ಕೊಡಬೇಕು ಎಂದು ಸಭೆಯಲ್ಲಿ ತಿಳಿಸಿದ್ದೆವು. ಆದರೆ, ಅದಕ್ಕೂ ಒಪ್ಪಿಕೊಂಡಿಲ್ಲ. ಆದಕಾರಣ ಸಭೆ ವಿಫಲಗೊಂಡಿದೆ ಎಂದು ಕಬ್ಬು ಬೆಳೆಗಾರರು ತಿಳಿಸಿದ್ದಾರೆ.
ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಜಿಲ್ಲೆಯ ಹುಮನಾಬಾದ್‌ನಲ್ಲಿ ಬುಧವಾರ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಾದ ಶಿವಾನಂದ ಪಾಟೀಲ, ಈಶ್ವರ ಬಿ. ಖಂಡ್ರೆಯವರ ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ ಹೊರಹಾಕಿದ್ದರು. ಇದಾದ ಬೆನ್ನಲ್ಲೇ ಜಿಲ್ಲಾಡಳಿತ ಸಭೆ ಕರೆದಿತ್ತು.
ಕರ್ನಾಟಕ ರಾಜ್ಯ ರೈತ ಸಂಘದ (ಕೋಡಿಹಳ್ಳಿ ಬಣ) ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಬಡಗಲಪುರ ನಾಗೇಂದ್ರ ಬಣದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ರೈತ ಮುಖಂಡರಾದ
ಶ್ರೀಮಂತ ಬಿರಾದಾರ, ದಯಾನಂದ ಸ್ವಾಮಿ, ಶಂಕ್ರೆಪ್ಪ ಪಾರಾ, ಪ್ರಕಾಶ ಬಾವಗೆ, ಸತೀಶ ನಲ್ಲೂರೆ, ರಾಮರಾವ್, ಚಂದ್ರಶೇಖರ್ ಜಮಖಂಡಿ ಮತ್ತಿತರರು ಪಾಲ್ಗೊಂಡಿದ್ದರು.
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಇತರೆ ಕಾರ್ಖಾನೆಗಳ ವ್ಯವಸ್ಥಾಪಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.