ADVERTISEMENT

ಮಂದಗತಿಯಲ್ಲಿ ಅಭಿವೃದ್ಧಿ ಕಾಮಗಾರಿ: ಜಿಲ್ಲಾ ಉಸ್ತುವಾರಿ ರಮಣರೆಡ್ಡಿ ಅಸಮಾಧಾನ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 13:36 IST
Last Updated 27 ಫೆಬ್ರುವರಿ 2020, 13:36 IST
ಬೀದರ್‌ನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಮಾತನಾಡಿದರು. ಜಿಲ್ಲಾಧಿಕಾರಿ ಎಚ್‌.ಆರ್‌.ಮಹಾದೇವ, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್ ಇದ್ದಾರೆ
ಬೀದರ್‌ನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಮಾತನಾಡಿದರು. ಜಿಲ್ಲಾಧಿಕಾರಿ ಎಚ್‌.ಆರ್‌.ಮಹಾದೇವ, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್ ಇದ್ದಾರೆ   

ಬೀದರ್‌: ‘ಲೋಕೋಪಯೋಗಿ ಇಲಾಖೆ, ಪಂಚಾಯತ್‌ ರಾಜ್ ಎಂಜಿನಿಯರಿಂಗ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕೆಲವೆಡೆ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದರೂ ಅನುದಾನ ಕಡಿಮೆ ಪ್ರಮಾಣದಲ್ಲಿ ಖರ್ಚಾಗಿದೆ. ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಅನುದಾನ ಸಂಪೂರ್ಣ ಖರ್ಚಾಗುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ಸಣ್ಣ ಪುಟ್ಟ ಸಮಸ್ಯೆಗಳು ಎದುರಾದಲ್ಲಿ ಅಧಿಕಾರಿಗಳು ತಮ್ಮ ಹಂತದಲ್ಲಿಯೇ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕು. ಸಮಸ್ಯೆ ಗಂಭೀರವಾಗಿದ್ದಲ್ಲಿ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಮನಕ್ಕೆ ತಂದು ಇತ್ಯರ್ಥಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಎಲ್ಲ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಬೇಕು’ ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೆಲವೆಡೆ ಕಟ್ಟಡ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಎದುರಾಗಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಮಾತನಾಡಿ, ‘ಸಮುದಾಯ ಭವನದಂತಹ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನ ಇಲ್ಲದಿದ್ದರೆ ಸಂಬಂಧಿಸಿದ ಶಾಸಕರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ್ ಶ್ರೀಧರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.