
ಬೀದರ್: ವೇತನ ಬಿಡುಗಡೆಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಚಾಲಕರ ಒಕ್ಕೂಟ ನೇತೃತ್ವದಲ್ಲಿ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕಿಯರು ಹಾಗೂ ಸಹಾಯಕಿಯರು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಸೋಮವಾರ ಧರಣಿ ನಡೆಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಶ್ರಮಿಸುತ್ತಿರುವವರಿಗೆ ಕಳೆದ ಮೂರು ವರ್ಷಗಳಿಂದ ವೇತನ ನೀಡಿಲ್ಲ. ಸರ್ಕಾರದ ಯಾವುದೇ ಸೌಕರ್ಯ ಕೂಡ ಕಲ್ಪಿಸುತ್ತಿಲ್ಲ. ಮಕ್ಕಳ ಶಿಕ್ಷಣ ಸೇರಿದಂತೆ ಜೀವನ ನಿರ್ವಹಣೆಗೆ ತೊಂದರೆ ಉಂಟಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಗೋಳು ತೋಡಿಕೊಂಡಿದ್ದಾರೆ.
ವೇತನ ಬಿಡುಗಡೆಗೊಳಿಸಬೇಕೆಂದು ಮೂರ್ನಾಲ್ಕು ಸಲ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಒಂದು ವಾರದೊಳಗೆ ವೇತನ ಬಿಡುಗಡೆಗೆ ಕ್ರಮ ಕಯಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಒಕ್ಕೂಟದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕಾ ಸೋಮನಾಥ, ಉಪಾಧ್ಯಕ್ಷೆ ಪ್ರಿಯಾರಾಣಿ ಪ್ರಭು, ವಿವಿಧ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನಗಳ ಚಾಲಕಿಯರು, ಸಹಾಯಕಿಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.