
ಬೀದರ್: 2024-25ನೇ ಸಾಲಿನಲ್ಲಿ ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಫಲಿತಾಂಶ ತೃಪ್ತಿಕರವಾಗಿಲ್ಲ ಎಂಬುದು ಗಮನಕ್ಕೆ ಬಂದಿದ್ದು, ಇದನ್ನು ಸುಧಾರಿಸಲು ಮನೆ ಮನೆಗೆ ಭೇಟಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ್ ಬದೋಲೆ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಬೀದರ್ ಜಿಲ್ಲಾ ಪಂಚಾಯತ್ ವತಿಯಿಂದ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳ ಸಹಯೋಗದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಗುಣಮಟ್ಟ ಹೆಚ್ಚಿಸಲು ಮತ್ತು ಫಲಿತಾಂಶ ಉತ್ತಮಗೊಳಿಸಲು ಮಾರ್ಗದರ್ಶನ ಹಾಗೂ ಮೇಲ್ವಿಚಾರಣಾ ವ್ಯವಸ್ಥೆಗಳ ಸಲುವಾಗಿ ವಿದ್ಯಾರ್ಥಿಗಳ ಮನೆ ಭೇಟಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಗುರುವಾರ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದಕ್ಕೆ ಪೂರಕವಾಗಿ ಜಿಲ್ಲಾ ಹಂತದಲ್ಲಿ ವಿದ್ಯಾರ್ಥಿಗಳ ಮನೆ ಭೇಟಿಯ ಮಾಹಿತಿ ವಿವರ ಪಡೆಯಲು ಸ್ಪ್ರೆಡ್ ಶೀಟ್ ಸಿದ್ದಪಡಿಸಿ, ಪ್ರತಿದಿನ ಎಷ್ಟು ವಿದ್ಯಾರ್ಥಿಗಳ ಮನೆಗೆ ಅಧಿಕಾರಿ, ಸಿಬ್ಬಂದಿ ವರ್ಗದವರು ಭೇಟಿ ನೀಡಿದ್ದಾರೆ ಎನ್ನುವುದರ ಕುರಿತು ಮಾಹಿತಿ ಪಡೆಯಲಾಗುತ್ತಿದೆ. ನಮೂನೆ ಮಾಹಿತಿ ಪ್ರಕಾರ ಇದುವರೆಗೆ ಸುಮಾರು 293 ಜನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮನೆಗೆ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ತುಂಬುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಗ್ರಾಮಿಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮನೆ-ಮನೆಗೆ ತೆರಳಿ ಪರೀಕ್ಷಾ ಸಿದ್ಧತೆಯನ್ನು ಪರಿಶೀಲಿಸುತ್ತಿದ್ದಾರೆ. ಓದಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ಮಕ್ಕಳ ದಿನನಿತ್ಯದ ಚಟುವಟಿಕೆಗಳು ಮತ್ತು ಓದಿನ ಕುರಿತು ಪೋಷಕರಿಂದ ಮಾಹಿತಿ ಪಡೆಯಲಾಗುತ್ತಿದೆ. ಶೈಕ್ಷಣಿಕ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ದಾಖಲಿಸಿ, ಶೇ. 100 ಸಾಧನೆಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಫಲಿತಾಂಶ ಸುಧಾರಣೆಗೆ ಹೊಸ ಟಾಸ್ಕ್
* ವಿದ್ಯಾರ್ಥಿಗಳ ಅಧ್ಯಯನ ಸ್ಥಿತಿಯನ್ನು ಪರಿಶೀಲಿಸುವುದು.
* ಪಾಲಕರೊಂದಿಗೆ ಚರ್ಚೆ ನಡೆಸುವುದು.
* ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ ಪರೀಕ್ಷೆಗೆ ಸಿದ್ಧತೆಗೊಳಿಸುವುದು.
* ಅಗತ್ಯವಿದ್ದಲ್ಲಿ ಶಾಲಾ ಶಿಕ್ಷಕರೊಂದಿಗೆ ಸಮನ್ವಯ ಸಾಧಿಸುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.