ಬೀದರ್: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೊಲೀಸರು ಬೇಡವೆಂದರೂ ಅದನ್ನು ಲೆಕ್ಕಿಸದೆ ಟೈರ್ ಸುಟ್ಟು ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ಉಂಟಾಯಿತು. ಆನಂತರ ಪೊಲೀಸರು ನೀರು ಸುರಿದು ಬೆಂಕಿ ನಂದಿಸಿದರು.
ಮುಡಾ ಹಗರಣದ ವಿರುದ್ಧ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ತೆರಳುತ್ತಿದ್ದ ವಿಜಯೇಂದ್ರ ಅವರನ್ನು ಮಾರ್ಗ ಮಧ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿ ಆರ್. ಅಶೋಕ ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಅವರ ದನಿ ಅಡಗಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಿದೆ. ವಾಲ್ಮೀಕಿ ನಿಗಮ ಹಾಗೂ ಮುಡಾದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ಪ್ರಮುಖರಾದ ಅಶೋಕ ಹೊಕ್ರಾಣಿ, ಮಹೇಶ್ವರ ಸ್ವಾಮಿ, ವೀರು ದಿಗ್ವಾಲ್, ಮಾಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.