
ಬೀದರ್: ಸರ್ಕಾರ ಘೋಷಿಸಿದ ಪ್ರತಿ ಟನ್ ಕಬ್ಬಿಗೆ ₹ 3300 ದರವನ್ನು ಎಲ್ಲ ಜಿಲ್ಲೆಗಳಿಗೂ ಅನ್ವಯಿಸಬೇಕು ಎಂಬುದು ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ನಗರದ ಗಾಂಧಿಗಂಜ್‌ನಿಂದ ಕೃಷಿ ಜಂಟಿ ನಿರ್ದೇಶಕರ ಕಚೇರಿವರೆಗೆ ಟ್ರ್ಯಾಕ್ಟರ್‌ನಲ್ಲಿ ಆಗಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ತಡೆದರು. ನಂತರ ಪಕ್ಷದ ಮುಖಂಡರು ಮಾತನಾಡಿ, ಒಂದು ಜಿಲ್ಲೆಯಲ್ಲಿ ಹೆಚ್ಚಿನ ದರ ಇನ್ನೊಂದು ಜಿಲ್ಲೆಯಲ್ಲಿ ಕಡಿಮೆ ನೀಡುವ ಅನ್ಯಾಯಕ್ಕೆ ಕಡಿವಾಣ ಹಾಕಿ ಕಡ್ಡಾಯವಾಗಿ ಪ್ರತಿ ಟನ್ ಕಬ್ಬಿಗೆ ₹ 3,300 ನೀಡಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಘೋಷಣೆ ಮಾಡಿದ ಅತಿವೃಷ್ಟಿ ಪರಿಹಾರ ಹಣವನ್ನು ಎಲ್ಲ ರೈತರ ಖಾತೆಗೆ ಶೀಘ್ರ ಜಮೆ ಮಾಡಬೇಕು. ರೈತರ ಪ್ರತಿ ಲೀಟರ್ ಹಾಲಿನ ಪ್ರೋತ್ಸಾಹ ಧನ 620 ಕೋಟಿ ಬಾಕಿಯನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ್, ಮಾಜಿ ಶಾಸಕ ಪ್ರಕಾಶ ಖಂಡ್ರೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ, ಮಹಾನಗರ ಪಾಲಿಕೆ ಸದಸ್ಯ ಶಶಿಧರ ಹೊಸಳ್ಳಿ, ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಗುರುನಾಥ ಜ್ಯಾಂತಿಕರ್, ಪೀರಪ್ಪ ಔರಾದೆ, ವಿಕ್ರಮ ಮುದಾಳೆ, ದೀಪಕ್ ಗಾದಗೆ, ಸಂತೋಷರಡ್ಡಿ, ವೀರೇಶ ಸ್ವಾಮಿ, ರೋಷನ್ ವರ್ಮಾ, ಗಣೇಶ ಭೋಸ್ಲೆ, ಉಪೇಂದ್ರ ದೇಶಪಾಂಡೆ, ಬಸವರಾಜ ಪವಾರ್ ಇತರರಿದ್ದರು.
ಅತಿವೃಷ್ಟಿಯಿಂದ ರೈತರು ಸಮಸ್ಯೆಯಲ್ಲಿದ್ದಾರೆ. ಅವರಿಗೆ ಸಮರ್ಪಕ ಪರಿಹಾರ ಸಿಗಬೇಕು. ರೈತರ ಬೇಡಿಕೆ ಸ್ಪಂದಿಸುವಂತೆ ಒತ್ತಾಯಿಸಿ ಡಿ.8ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ಹೋರಾಟ ಹಮ್ಮಿಕೊಳ್ಳಲಾಗಿದೆ.ಸೋಮನಾಥ ಪಾಟೀಲ ಜಿಲ್ಲಾ ಬಿಜೆಪಿ ಅಧ್ಯಕ್ಷ
ಅತಿವೃಷ್ಟಿ ಪರಿಹಾರ ವಿತರಣೆಯಲ್ಲಿ ರೈತರ ನಡುವೆ ಬಹಳ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ಎಲ್ಲ ರೈತರಿಗೆ ಸಮರ್ಪಕವಾಗಿ ಪರಿಹಾರ ವಿತರಣೆ ಮಾಡಲು ಕ್ರಮಕೈಗೊಳ್ಳಬೇಕು.ಡಾ.ಶೈಲೇಂದ್ರ ಬೆಲ್ದಾಳೆ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.