ADVERTISEMENT

ವಾಮ ಮಾರ್ಗದಿಂದ ಬಿಜೆಪಿ ಅಧಿಕಾರಕ್ಕೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಟೀಕೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 14:31 IST
Last Updated 24 ನವೆಂಬರ್ 2020, 14:31 IST
ಬಸವಕಲ್ಯಾಣದಲ್ಲಿ ಮಂಗಳವಾರ ಬಸವಕಲ್ಯಾಣ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಅವರ ಪರವಾಗಿ ಜೆಸಿಬಿ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಮಾಲಾರ್ಪಣೆ ಮಾಡಲಾಯಿತು. ವಿಜಯಸಿಂಗ್‌ ಇದ್ದಾರೆ
ಬಸವಕಲ್ಯಾಣದಲ್ಲಿ ಮಂಗಳವಾರ ಬಸವಕಲ್ಯಾಣ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಅವರ ಪರವಾಗಿ ಜೆಸಿಬಿ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಮಾಲಾರ್ಪಣೆ ಮಾಡಲಾಯಿತು. ವಿಜಯಸಿಂಗ್‌ ಇದ್ದಾರೆ   

ಬಸವಕಲ್ಯಾಣ (ಬೀದರ್ ಜಿಲ್ಲೆ): ‘ಬಿಜೆಪಿಯವರು ವಾಮ ಮಾರ್ಗಗಳ ಮೂಲಕ ಅಧಿಕಾರ ಹಿಡಿದಿದ್ದಾರೆ. ಉಪ ಚುನಾವಣೆಯಲ್ಲಿ ಹಣ ಖರ್ಚು ಮಾಡಿ ಆಮಿಷ ಒಡ್ಡುತ್ತಾರೆ. ಪ್ರತಿಸ್ಪರ್ಧಿಗಳು ಪ್ರತಿಯೊಂದು ಮನೆಗೂ ಒಂದು ಬಂಡಲ್‌ ಹಣ ಖರ್ಚು ಮಾಡಲಿ, ನಾವು ಮಾತ್ರ ಪ್ರೀತಿ, ವಿಶ್ವಾಸದಿಂದ ಜನರ ಮನಸ್ಸು ಗೆಲ್ಲೋಣ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.

ಇಲ್ಲಿಯ ಬೇಗ್ ಫಂಕ್ಷನ್ ಹಾಲ್‍ನಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಬಿ.ನಾರಾಯಣರಾವ್‌ ಅವರು ಹಣ ಖರ್ಚು ಮಾಡಿ ಚುನಾಯಿತರಾಗಿರಲಿಲ್ಲ. ಪ್ರೀತಿ, ವಿಶ್ವಾಸದ ಮೂಲಕ ಜನರ ಮತ ಪಡೆದಿದ್ದರು' ಎಂದು ತಿಳಿಸಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಎಲ್ಲ ವರ್ಗದವರೂ ಅಧಿಕಾರಕ್ಕೆ ಬಂದಿದ್ದರು. ಕಾಂಗ್ರೆಸ್‌ ಇತಿಹಾಸವೇ ದೇಶದ ಇತಿಹಾಸವಾಗಿದೆ. ಕಾಂಗ್ರೆಸ್‌ ಶಕ್ತಿಯೇ ದೇಶದ ಶಕ್ತಿಯಾಗಿದೆ. ಕಾಂಗ್ರೆಸ್‌ ತನ್ನ ಅಧಿಕಾರ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಇದನ್ನು ಮತದಾರರಿಗೆ ಮನವರಿಕೆ ಮಾಡಬೇಕು’ ಎಂದು ತಿಳಿಸಿದರು.

ADVERTISEMENT

ಕಲ್ಯಾಣ ಕರ್ನಾಟಕದಿಂದ ವಿಧಾನಸಭೆಗೆ 23 ಜನ ಕಾಂಗ್ರೆಸ್ ಶಾಸಕರನ್ನು ಕಳಿಸುವ ಮೂಲಕ ಕಾರ್ಯಕರ್ತರು ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. ಉಪ ಚುನಾವಣೆಯಲ್ಲಿ ಮುಖಂಡರು ಸೇರಿದಂತೆ ಪ್ರತಿಯೊಬ್ಬರು ಅಭ್ಯರ್ಥಿಯಂತೆ ಕೆಲಸ ಮಾಡಬೇಕು. ಪ್ರತಿಯೊಂದು ಪಂಚಾಯಿತಿಗೆ ಭೇಟಿ ಕೊಟ್ಟು ಮತದಾರರ ಮನವೊಲಿಸಬೇಕು. ಪ್ರತಿಯೊಬ್ಬರು ಹೊಸದಾಗಿ ಹತ್ತಾರು ಮತಗಳನ್ನು ಹಾಕಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ ಸೇರಿದಂತೆ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಕಾಂಗ್ರೆಸ್‌ ಅಭ್ಯರ್ಥಿಗೆ ಲೀಡ್‌ ಕೊಡಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ಎಲ್ಲ 16 ಜನ ಟಿಕೆಟ್‌ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.