ADVERTISEMENT

ಬಸವಕಲ್ಯಾಣ ಉಪ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 14:13 IST
Last Updated 24 ಫೆಬ್ರುವರಿ 2021, 14:13 IST
ಬೆಂಗಳೂರಿನಲ್ಲಿ ನಡೆದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ರಘುನಾಥರಾವ್ ಮಲ್ಕಾಪುರೆ, ರಾಜಕುಮಾರ ಪಾಟೀಲ ತೇಲ್ಕೂರ್, ಭಗವಂತ ಖೂಬಾ, ವಿ. ಸೋಮಣ್ಣ, ಲಕ್ಷ್ಮಣ ಸವದಿ, ಪ್ರಭು ಚವಾಣ್ ಪಾಲ್ಗೊಂಡಿದ್ದರು
ಬೆಂಗಳೂರಿನಲ್ಲಿ ನಡೆದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ರಘುನಾಥರಾವ್ ಮಲ್ಕಾಪುರೆ, ರಾಜಕುಮಾರ ಪಾಟೀಲ ತೇಲ್ಕೂರ್, ಭಗವಂತ ಖೂಬಾ, ವಿ. ಸೋಮಣ್ಣ, ಲಕ್ಷ್ಮಣ ಸವದಿ, ಪ್ರಭು ಚವಾಣ್ ಪಾಲ್ಗೊಂಡಿದ್ದರು   

ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಯುಕ್ತ ಬಿಜೆಪಿಯಲ್ಲಿ ಚಟುವಟಿಕೆಗಳು ಬಿರುಸುಗೊಂಡಿದ್ದು, ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ಟಿಕೆಟ್ ಆಕಾಂಕ್ಷಿಗಳು ಮತ್ತು ಬಿಜೆಪಿ ಮುಖಂಡರ ಸಭೆ ನಡೆಯಿತು.

18ಕ್ಕೂ ಹೆಚ್ಚು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಭಾಗವಹಿಸಿ ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಭೆಯಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಯಿತು.

‘ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಹಲವರು ಟಿಕೆಟ್‍ಗೆ ಮನವಿ ಮಾಡಿದ್ದಾರೆ. ಎಲ್ಲ ಆಕಾಂಕ್ಷಿಗಳ ವಿವರಗಳನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಿದ್ದು, ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದು ಲಕ್ಷ್ಮಣ ಸವದಿ ತಿಳಿಸಿದರು.

ADVERTISEMENT

‘ವರಿಷ್ಠರು ಏನೇ ತೀರ್ಮಾನ ಕೈಗೊಂಡರೂ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದು ಸಲಹೆ ಮಾಡಿದರು.

‘ಚುನಾವಣೆಯಲ್ಲಿ ಮತದಾರರ ಮನ ಗೆಲ್ಲುವಲ್ಲಿ ಬಿಜೆಪಿ ಕಾರ್ಯಕರ್ತರು ಮುಂಚೂಣಿಯಲ್ಲಿರಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.

ಬಸವಕಲ್ಯಾಣ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಪ್ರಚಾರದ ರೂಪುರೇಷೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ತಮ್ಮ ಸಲಹೆ ನೀಡಿದರು.

ಸಚಿವರಾದ ಪ್ರಭು ಚವಾಣ್, ವಿ. ಸೋಮಣ್ಣ, ಸಂಸದ ಭಗವಂತ ಖೂಬಾ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರ್, ವಿಭಾಗ ಸಹ ಪ್ರಭಾರಿ ಈಶ್ವರ್ ಸಿಂಗ್ ಠಾಕೂರ್, ಮಾಜಿ ಶಾಸಕ ಅಮರನಾಥ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.