ADVERTISEMENT

ಬೀದರ್‌ | ಬಾಲ್ಯವಿವಾಹದಿಂದ ಅನೇಕ ವಿಧದ ಸಮಸ್ಯೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬಾಲ್ಯ ವಿವಾಹ ನಿಷೇಧ ಜಿಲ್ಲಾಮಟ್ಟದ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 6:15 IST
Last Updated 3 ಅಕ್ಟೋಬರ್ 2025, 6:15 IST
ಬಾಲ್ಯ ವಿವಾಹ ನಿಷೇಧಕ್ಕೆ ಸಂಬಂಧಿಸಿದ ಜಿಲ್ಲಾಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು
ಬಾಲ್ಯ ವಿವಾಹ ನಿಷೇಧಕ್ಕೆ ಸಂಬಂಧಿಸಿದ ಜಿಲ್ಲಾಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು   

ಬೀದರ್‌: ‘ಹೆಣ್ಣು ಮಕ್ಕಳಿಗೆ ಬಾಲ್ಯದಲ್ಲಿಯೇ ವಿವಾಹ ಮಾಡಿದರೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಆದಕಾರಣ ಯಾರು ಕೂಡ ವಯಸ್ಸಿಗೂ ಮುಂಚೆ ಮದುವೆ ಮಾಡಿಸಬಾರದು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಜಿಲ್ಲಾಡಳಿತ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಪಂಚಾಯಿತಿ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಹಾಗೂ ಕರ್ನಾಟಕ ತಿದ್ದುಪಡಿ ಕಾಯ್ದೆ 2016ರ ಬಗ್ಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಒಂದು ದಿನದ ಕಾರ‍್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಬಾಲ್ಯ ವಿವಾಹ ತಡೆಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ನಿರ್ಲಕ್ಷ್ಯ ತೋರಿದರೆ ಅದು ಅಪರಾಧಕ್ಕೆ ಸಮ. ಅಧಿಕಾರಿಗಳಷ್ಟೇ ಅಲ್ಲ, ಸಾರ್ವಜನಿಕರು ಕೂಡ ಬಾಲ್ಯ ವಿವಾಹಗಳು ನಡೆಯುತ್ತಿರುವುದು ಗೊತ್ತಾದರೆ 1098 ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು ಎಂದು ಹೇಳಿದರು.

ADVERTISEMENT

ಮಕ್ಕಳು ಶಾಲೆಯಿಂದ ದೂರ ಉಳಿದರೆ ಶಿಕ್ಷಕರು ಅವರ ಮನೆಗೆ ಭೇಟಿ ನೀಡಿ ಕಾರಣ ತಿಳಿದುಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಬಾಲ್ಯದಲ್ಲಿಯೇ ವಿವಾಹವಾದರೆ ಅದರಿಂದಾಗುವ ಸಮಸ್ಯೆಗಳ ಮನವರಿಕೆ ಮಾಡಿಕೊಡಬೇಕು. ಬೇಗ ಮದುವೆ ಮಾಡಿದರೆ ಗರ್ಭಕೋಶದಲ್ಲಿ ಮಗುವಿನ ಬೆಳವಣಿಗೆ ಆಗುವುದಿಲ್ಲ. ಹೆರಿಗೆ ಸಮಯದಲ್ಲಿ ಸಮಸ್ಯೆಗಳು ಉಂಟಾಗುತ್ತವೆ. ಕಲ್ಯಾಣ ಮಂಟಪಗಳು, ಮದುವೆ ಪತ್ರಿಕೆ ಮುದ್ರಿಸುವ ಮಳಿಗೆಗಳ ಮಾಲೀಕರು, ಪುರೋಹಿತರು ಕಡ್ಡಾಯವಾಗಿ ವಧು-ವರರ ವಯಸ್ಸು ಪರಿಶೀಲಿಸಬೇಕು ಎಂದು ತಿಳಿಸಿದರು.

ಮಕ್ಕಳು ಪೋಷಕರ ಒತ್ತಡಕ್ಕೆ ಅಥವಾ ಆರ್ಥಿಕ ಸಮಸ್ಯೆಗಳಿಂದಾಗಿ ವಿವಾಹಕ್ಕೆ ಮುಂದಾಗುತ್ತಾರೆ. ಇಂತಹ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು, ಶಿಕ್ಷಕರು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಬಾಲ್ಯವಿವಾಹ ತಡೆಯಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ‍್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಉದ್ಘಾಟಿಸಿ, ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗು. ಅದನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಬಾಲ್ಯವಿವಾಹದಿಂದ ಮಕ್ಕಳು ತಮ್ಮ ಬಾಲ್ಯದ ಜೀವನವನ್ನು ಕಳೆದುಕೊಳ್ಳುತ್ತಾರೆ. ಅವರ ಹಕ್ಕುಗಳು ಮತ್ತು ಬಾಲ್ಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಈ ವರ್ಷ 50 ಗ್ರಾಮಗಳನ್ನು ಬಾಲ್ಯವಿವಾಹ ಮುಕ್ತ ಗ್ರಾಮಗಳಾಗಿ ಮಾಡಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿಸಲು ಎಲ್ಲರೂ ಶ್ರಮಿಸಬೇಕು ಎಂದರು.

ವಕೀಲ ಬಸವರಾಜ ಬುಳ್ಳಾ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಮಾತನಾಡಿದರು. ಮಕ್ಕಳ ಸಹಾಯವಾಣಿ ಪೋಸ್ಟರ್‌ ಬಿಡುಗಡೆ ಮಾಡಲಾಯಿತು. ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಮ್.ಎಸ್., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೋಟೆಗೌಡರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸೀಮಪ್ಪಾ, ಮಕ್ಕಳ ಸಂರಕ್ಷಣಾಧಿಕಾರಿ ಗೌರಿಶಂಕರ ಪ್ರತಾಪುರ ಇದ್ದರು.

ಮುಖ್ಯಾಂಶಗಳು... * ಬಾಲ್ಯ ವಿವಾಹ ಸಾಮಾಜಿಕ ಪಿಡುಗು * ಬಾಲ್ಯ ವಿವಾಹ ತಡೆಯದಿದ್ದರೆ ಅಪರಾಧ * 1098 ಮಕ್ಕಳ ಸಹಾಯವಾಣಿ ಕರೆಗೆ ಸಲಹೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.