ADVERTISEMENT

ವಿಮಾನಯಾನ ಆರಂಭಕ್ಕೆ ಆಸಕ್ತಿ ತೋರದ ಖೂಬಾ

ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಆರೋಪ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2019, 15:31 IST
Last Updated 30 ಏಪ್ರಿಲ್ 2019, 15:31 IST
ಬೀದರ್‌ನ ಗಾಂಧಿ ಗಂಜ್‌ನಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಮಾತನಾಡಿದರು. ಕಾಂಗ್ರೆಸ್‌ ಜಿಲ್ಲಾ ಘಟಕ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ, ಉದ್ಯಮಿ ಬಸವರಾಜ ಧನ್ನೂರ, ಕ್ರೀಡಾ ಸಚಿವ ರಹೀಂ ಖಾನ್ ಇದ್ದರು
ಬೀದರ್‌ನ ಗಾಂಧಿ ಗಂಜ್‌ನಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಮಾತನಾಡಿದರು. ಕಾಂಗ್ರೆಸ್‌ ಜಿಲ್ಲಾ ಘಟಕ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ, ಉದ್ಯಮಿ ಬಸವರಾಜ ಧನ್ನೂರ, ಕ್ರೀಡಾ ಸಚಿವ ರಹೀಂ ಖಾನ್ ಇದ್ದರು   

ಬೀದರ್: ‘ಬೀದರ್‌ನಿಂದ ನಾಗರಿಕ ವಿಮಾನಯಾನ ಆರಂಭಿಸಲು ಸಂಸದ ಭಗವಂತ ಖೂಬಾ ಆಸಕ್ತಿ ತೋರಲಿಲ್ಲ’ ಎಂದು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಆರೋಪಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಜಿಲ್ಲಾಬ್ಲಾಕ್ ಕಾಂಗ್ರೆಸ್ ಹಾಗೂ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ನಾನು ಸಚಿವನಾಗಿದ್ದಾಗ ನಾಗರಿಕ ವಿಮಾನಯಾನ ಸೇವೆ ಆರಂಭಿಸುವಸಂಬಂಧ ಮೂರು ಸಭೆಗಳನ್ನು ಕರೆಯಲಾಗಿತ್ತು. ಸಂಸದ ಖೂಬಾ ಅವರಿಗೂ ಆಹ್ವಾನ ನೀಡಲಾಗಿತ್ತು’ ಎಂದು ತಿಳಿಸಿದರು.

ADVERTISEMENT

‘ಎಫ್‍.ಎಂ. ಕೇಂದ್ರ ಆರಂಭ ಮಾಡಲಾಗುವುದು ಎಂದು ಖೂಬಾ ಹೇಳುತ್ತಲೇ ಇದ್ದಾರೆ. ಅವಧಿ ಮುಗಿದರೂ ಕೆಲಸ ಮಾತ್ರ ಆಗಿಲ್ಲ’ ಎಂದು ಟೀಕಿಸಿದರು.

‘ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹೆಸರು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಈ ಯೋಜನೆಯಲ್ಲಿ ಜಿಲ್ಲೆಯ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಸಂಸದರು ವಸ್ತು ಸ್ಥಿತಿಯನ್ನು ಮರೆಮಾಚಿ, ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಐದು ವರ್ಷಗಳಲ್ಲಿ ಅಭಿವೃದ್ಧಿ ಕೆಲಸ ಮಾಡದ ಖೂಬಾ ಅವರಿಗೆ ಏಕೆ ಮತ ಕೊಡಬೇಕು’ ಎಂದು ಪ್ರಶ್ನಿಸಿದ ಅವರು, ಕೆಲಸ ಮಾಡಿದವರಿಗೆ ಪ್ರಾಶಸ್ತ್ಯ ನೀಡಬೇಕು’ ಎಂದು ಹೇಳಿದರು.

‘ಸುಳ್ಳು ಹೇಳುವುದೇ ಬಿಜೆಪಿಯವರ ಸಾಧನೆಯಾಗಿದೆ. ಸುಳ್ಳನ್ನು ಸತ್ಯವೆಂದು ಬಿಂಬಿಸುವ ಯತ್ನ ನಡೆಯುತ್ತಿದೆ. ಮತದಾರರು ಸುಳ್ಳು ಹೇಳುವ, ಮೋಸ ಮಾಡುವ, ಜಾತಿ ಹೆಸರಿನಲ್ಲಿ ಜಗಳ ಹಚ್ಚುವ ಬಿಜೆಪಿಗೆ ಸರಿಯಾದ ಪಾಠ ಕಲಿಸಬೇಕು’ ಎಂದು ಹೇಳಿದರು.

‘ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಜಿಲ್ಲೆಗೆ ಹತ್ತಾರು ಕೊಡುಗೆಗಳನ್ನು ನೀಡಿದ್ದೇನೆ. ನಗರ ಸ್ಥಳಿಯ ಸಂಸ್ಥೆಗಳಿಗೆ ನೂರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದೆ. ಕಾರಂಜಾ ಕಾಲುವೆ ಆಧುನೀಕರಣ, ಕೆರೆಗಳ ಸುಧಾರಣೆ, ಕೆರೆ ಭರ್ತಿ ಸೇರಿದಂತೆ ನೀರಾವರಿ ಯೋಜನೆಗಳಿಗೆ ಒಂದು ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ’ ಎಂದು ತಿಳಿಸಿದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ಮಾತನಾಡಿ, ‘ಬಿಜೆಪಿ 2014 ರ ಚುನಾವಣೆಯಲ್ಲಿ ನೀಡಿದ ಭರವಸೆಗಳು ಹುಸಿಯಾಗಿವೆ. ಕಾಂಗ್ರೆಸ್ ಕಾರ್ಯಕರ್ತರು ಈ ಬಗೆಗೆ ಜನಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ರಹೀಂಖಾನ್‌ ಮಾತನಾಡಿ, ‘ಕಾಂಗ್ರೆಸ್ ಅಭ್ಯರ್ಥಿಗೆ ಬೀದರ್ ಕ್ಷೇತ್ರದಲ್ಲಿ ಅತಿಹೆಚ್ಚು ಮತಗಳನ್ನು ಕೊಡಿಸಲಾಗುವುದು’ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್ ಮಾತನಾಡಿ, ‘ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪರಿವಾರ ಪಕ್ಷ ನಿಷ್ಠೆಗೆ ಹೆಸರಾಗಿದೆ. ಈ ಪರಂಪರೆ ಮುಂದುವರೆಯಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಬೇಡ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಹೇಳಿದರು.

ಎಐಸಿಸಿ ಕಾರ್ಯದರ್ಶಿ ಯಶೋಮತಿ ಠಾಕೂರ್ ಇದ್ದರು. ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಮಾಜಿ ಶಾಸಕ ಅಶೋಕ ಖೇಣಿ, ಗುರಮ್ಮ ಸಿದ್ದಾರೆಡ್ಡಿ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕೆ. ಪುಂಡಲೀಕರಾವ್, ವಿಜಯಕುಮಾರ ಕೌಡಾಳೆ, ಮೀನಾಕ್ಷಿ ಸಂಗ್ರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.