ಬೀದರ್: ‘ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಪ್ರತಿ ಬೂತ್‌ನಿಂದ ಇಬ್ಬರು ‘ಡಿಜಿಟಲ್ ಯುತ್’ಗಳನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ ಸೊರಕೆ ತಿಳಿಸಿದರು.
ಬೂತ್, ಪಂಚಾಯಿತಿ ಮಟ್ಟದಿಂದ ಇಬ್ಬರನ್ನು ಆಯ್ಕೆ ಮಾಡಿ ಜವಾಬ್ದಾರಿ ವಹಿಸಲಾಗುವುದು. ಕಾಂಗ್ರೆಸ್ ಪಕ್ಷದ ಇತಿಹಾಸ, ಅದರ ತತ್ವ– ಸಿದ್ಧಾಂತಗಳು ಹಾಗೂ ಕರ್ನಾಟಕದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಕೆಲಸ ಇವರು ಮಾಡಲಿದ್ದಾರೆ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಾದ್ಯಂತ ಸುಮಾರು 1 ಲಕ್ಷ ಡಿಜಿಟಲ್ ಯುತ್‌ಗಳನ್ನು ನೇಮಕ ಮಾಡಲಾಗುವುದು. ಕಾಂಗ್ರೆಸ್ ಪಕ್ಷದಲ್ಲಿ ಇದುವರೆಗೆ ಪ್ರಚಾರ ಸಮಿತಿಗೆ ಪ್ರಾಮುಖ್ಯತೆ ಇರಲಿಲ್ಲ. ಈಗ ಹೆಚ್ಚಿನ ಮಹತ್ವ ನೀಡಲಾಗಿದೆ. ಪಕ್ಷದ ಎಲ್ಲ ಅಂಗ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ, 23 ಜನ ಪದಾಧಿಕಾರಿಗಳನ್ನು ಒಳಗೊಂಡ ಬ್ಲಾಕ್ ಮಟ್ಟದ ಸಮಿತಿಗಳನ್ನು ರಚಿಸಲಾಗುವುದು. ಇದರಲ್ಲಿ ಮಹಿಳೆಯರು ಸೇರಿದಂತೆ ವಿವಿಧ ವರ್ಗದವರಿಗೆ ಸಾಮಾಜಿಕ ನ್ಯಾಯದಡಿ ಪ್ರಾತಿನಿಧ್ಯ ನೀಡಲಾಗುವುದು ಎಂದರು.
ಈ ಸಮಿತಿ 365 ದಿನ ಸತತವಾಗಿ ಪಕ್ಷದ ಬಗ್ಗೆ ಪ್ರಚಾರ ಕೈಗೊಳ್ಳುವ ಕೆಲಸ ಮಾಡಲಿದೆ. ಈ ಸಂಬಂಧ ಈಗಾಗಲೇ ರಾಜ್ಯದ 25 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಿದ್ದೇನೆ. ಮಿಕ್ಕುಳಿದ ಜಿಲ್ಲೆಗಳ ಪ್ರವಾಸ ಇಷ್ಟರಲ್ಲೇ ಮುಗಿಯಲಿದ್ದು, ಆನಂತರ ಸಂಘಟನಾ ಕೆಲಸ ಶುರುವಾಗಲಿದೆ. ಬೂತ್ ಮಟ್ಟದಲ್ಲಿ ನಮ್ಮ ಪಕ್ಷಕ್ಕೆ ಸಂಬಂಧಿಸಿದ ಎಲ್ಲಾ ವಿಚಾರಗಳು ತಲುಪಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.
ಮತ ಕಳ್ಳತನದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೊಡ್ಡ ಮಟ್ಟದ ಹೋರಾಟ ಆರಂಭಿಸಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕೊಟ್ಟು ಮತದಾರರ ಪಟ್ಟಿಯ ಮೇಲೆ ನಿಗಾ ವಹಿಸಲು ಜವಾಬ್ದಾರಿ ವಹಿಸಲಾಗುವುದು. ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುನ್ನವೇ ಈ ಕೆಲಸ ಪ್ರಾರಂಭವಾಗಲಿದೆ ಎಂದರು.
ಪ್ರಚಾರ ಸಮಿತಿಯ ಉಪಾಧ್ಯಕ್ಷ ಭೀಮಣ್ಣ ಮೇಟಿ, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್. ಅಲಿ, ಜಾರ್ಜ್ ಫರ್ನಾಂಡಿಸ್, ಹಣಮಂತ ಚವಾಣ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.