
ಬೀದರ್: ‘ನ್ಯಾಷನಲ್ ಹೆರಾಲ್ಡ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಿತೂರಿ ನಡೆಸಿ, ಕಾಂಗ್ರೆಸ್ ಮುಖಂಡರ ತೇಜೋವಧೆಗೆ ಯತ್ನಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮನ್ನಾನ್ ಸೇಠ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಹಾಕಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪರ ಜಯಘೋಷ ಕೂಗಿದರು.
‘ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದುರುದ್ದೇಶದಿಂದ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಸರನ್ನು ಸೇರಿಸಿ ಕಪ್ಪು ಮಸಿ ಬಳಿಯಲು ಬಿಜೆಪಿ ಯತ್ನಿಸಿತ್ತು. ಆದರೆ, ನ್ಯಾಯಾಲಯದಲ್ಲಿ ಅದಕ್ಕೆ ಭಾರಿ ಮುಖಭಂಗವಾಗಿದೆ. ಬಿಜೆಪಿ ಪಿತೂರಿ ಬಯಲಾಗಿದೆ’ ಎಂದು ಮುಖಂಡರು ಹೇಳಿದರು.
ಬಿಜೆಪಿಯ ಈ ದ್ವೇಷದ ರಾಜಕಾರಣವನ್ನು ಖಂಡಿಸಿ, ಈ ದಿನ ಪ್ರತಿಭಟನೆ ನಡೆಸಲಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿಯ ಎಲ್ಲ ಷಡ್ಯಂತ್ರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.