ADVERTISEMENT

ಕೊರೊನಾ ವಿರುದ್ಧದ ಹೋರಾಟಕ್ಕೆ ಬೆಂಬಲ

ಲಾಕ್‌ಡೌನ್‌ ಇನ್ನಷ್ಟು ಬಿಗಿಗೊಳಿಸಲು ಜಿಲ್ಲೆಯ ಜನಪ್ರತಿನಿಧಿಗಳ ಒಕ್ಕೊರಲಿನ ಮನವಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 9:54 IST
Last Updated 9 ಏಪ್ರಿಲ್ 2020, 9:54 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಮಾತನಾಡಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಮಾತನಾಡಿದರು   

ಬೀದರ್‌: ಕೊರೊನಾ ವೈರಸ್‌ ಹರಡುವಿಕೆ ತಡೆಯಲು ಜಿಲ್ಲಾ ಆಡಳಿತ ಕ್ರಮ ಕೈಗೊಂಡರೂ ಅದು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಸೋಂಕಿತರ ಸಂಖ್ಯೆ ಎರಡು, ಮೂರು ಪಟ್ಟು ಹೆಚ್ಚಾಗುವ ಆತಂಕ ಇದೆ. ಹೀಗಾಗಿ ಜಿಲ್ಲೆಯಲ್ಲಿ ಲಾಕ್‌ಡೌನ್‌ ಅನ್ನು ಇನ್ನಷ್ಟು ಬಿಗಿಗೊಳಿಸಬೇಕು. ಕೋವಿಡ್‌–19 ವಿರುದ್ಧ ಜಿಲ್ಲಾಡಳಿತ ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಜಿಲ್ಲೆಯ ಜನಪ್ರತಿನಿಧಿಗಳು ಒಕ್ಕೊರಲಿನಿಂದ ಹೇಳಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅಧ್ಯಕ್ಷತೆಯಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಡಳಿತದ ಕ್ರಮಕ್ಕೆ ಸಮ್ಮತಿ ಸೂಚಿಸಿದರು.

‘ನಮ್ಮ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇರಲಿಲ್ಲ. ತಬ್ಲೀಗ್‌ಗಳಿಂದ ಸೋಂಕು ಬಂದಿದೆ. ಅವರನ್ನು ಬಿಟ್ಟರೆ ಬೇರೆ ಯಾರಿಗೂ ಹರಡಿಲ್ಲ. ಜಿಲ್ಲೆಯಲ್ಲಿ ಎಲ್ಲೇ ತಬ್ಲೀಗ್‌ಗಳು ಅಡಗಿ ಕುಳಿತರೂ ಅವರನ್ನು ಹುಡುಕಿ ತೆಗೆಯಬೇಕು. ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಂಸದ ಭಗವಂತ ಖೂಬಾ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪುರೆ, ‘ಪ್ರವಾಸಿ ವೀಸಾ ಪಡೆದು ಕಿರ್ಗಿಸ್ತಾನದಿಂದ ಬೀದರ್‌ ಜಿಲ್ಲೆಗೆ ಬಂದಿರುವ ವ್ಯಕ್ತಿಗಳನ್ನು ಬಂಧಿಸಿ ಅವರ ಪ್ರವಾಸಿ ವೀಸಾ ರದ್ದುಪಡಿಸಬೇಕು. ಸಂಸದರು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು’ ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಸದಸ್ಯರಾದ ವಿಜಯಸಿಂಗ್‌ ಹಾಗೂ ಅರವಿಂದ ಕುಮಾರ ಅರಳಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ, ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.