ADVERTISEMENT

ಕೋವಿಡ್ ಲಸಿಕೆ ಮೇಳ ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 14:25 IST
Last Updated 6 ಅಕ್ಟೋಬರ್ 2021, 14:25 IST
ಕೋವಿಡ್ ಲಸಿಕೆ ಮೇಳದ ನಿಮಿತ್ತ ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮಾತನಾಡಿದರು. ಡಾ. ರಾಜಶೇಖರ ಪಾಟೀಲ, ಡಾ. ವಿ.ಜಿ. ರೆಡ್ಡಿ ಇದ್ದರು
ಕೋವಿಡ್ ಲಸಿಕೆ ಮೇಳದ ನಿಮಿತ್ತ ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮಾತನಾಡಿದರು. ಡಾ. ರಾಜಶೇಖರ ಪಾಟೀಲ, ಡಾ. ವಿ.ಜಿ. ರೆಡ್ಡಿ ಇದ್ದರು   

ಬೀದರ್: ಜಿಲ್ಲೆಯಲ್ಲಿ ಅ. 8 ರಂದು ನಡೆಯಲಿರುವ ಲಸಿಕೆ ಮೇಳಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೇಳದ ಪ್ರಯುಕ್ತ ಅವರು ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಈ ಹಿಂದೆ ನಡೆದ ಲಸಿಕೆ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾರ್ವಜನಿಕರು 8 ರಂದು ನಡೆಯಲಿರುವ ಮೇಳಕ್ಕೂ ಸಹಕಾರ ನೀಡಬೇಕು. ಕೋವಿಡ್ ಲಸಿಕೆ ಪಡೆಯದವರು ಲಸಿಕೆ ಕೇಂದ್ರಗಳಿಗೆ ತೆರಳಿ ಲಸಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಲಭ್ಯ ಇವೆ. ಮೊದಲ ಲಸಿಕೆ ನಂತರದ ನಿಗದಿತ ಅವಧಿ ಪೂರ್ಣಗೊಂಡವರು ಎರಡನೇ ಡೋಸ್ ಪಡೆಯಬೇಕು ಎಂದು ತಿಳಿಸಿದರು.

ಮಳೆ ನೀರು ನಿಂತು, ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ, ಅನೇಕ ಕಾಯಿಲೆಗಳು ಹರಡುತ್ತಿವೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಶುಚಿತ್ವಕ್ಕೆ ಒತ್ತು ಕೊಡಬೇಕು ಎಂದು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಡೆಂಗೆ, ಚಿಕುನ್‍ಗುನ್ಯದಿಂದ ಯಾರೂ ಸಾವಿಗೀಡಾಗದಂತೆ ಎಚ್ಚರಿಕೆ ವಹಿಸಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‍ಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಬಾಬುರೆಡ್ಡಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಡಾ. ಭುವನೇಶ ಪಾಟೀಲ, ತಹಶೀಲ್ದಾರ್ ಶಕೀಲ್, ಆರ್‍ಸಿಚ್ ಅಧಿಕಾರಿ ಡಾ. ರಾಜಶೇಖರ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.