ADVERTISEMENT

ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಿರಲಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 15:47 IST
Last Updated 17 ಜುಲೈ 2021, 15:47 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್‌: ಬಕ್ರೀದ್ ಹಾಗೂ ಮತ್ತಿತರೆ ಸಂದರ್ಭಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌ ಮನವಿ ಮಾಡಿದ್ದಾರೆ.

ದನ, ಕರುಗಳು, 13 ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳನ್ನು ಅನಧಿಕೃತವಾಗಿ ವಧೆ ಹಾಗೂ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವಂತಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಕಾಯ್ದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಜಾನುವಾರುಗಳ ಸಂರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲ ತಾಲ್ಲೂಕುಗಳ ಸಹಾಯಕ ನಿರ್ದೇಶಕರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಜಿಲ್ಲೆಯಿಂದ ಯಾವೊಂದು ಗೋವು ಕಸಾಯಿಖಾನೆಗೆ ಹೋಗದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಗಡಿಯಲ್ಲಿರುವ ಚೆಕ್‍ಪೋಸ್ಟ್‌ಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದ್ದಾರೆ.

ADVERTISEMENT

ಕೋವಿಡ್-19 ಮಾರ್ಗಸೂಚಿ ಪಾಲಿಸಿ: ರಾಜ್ಯದೆಲ್ಲೆಡೆ ಅನ್‍ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯತೆ ಇದೆ. ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಯಾವುದೇ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಜನರು ಒಟ್ಟು ಗೂಡುವುದನ್ನು ನಿಷೇಧಿಸಿದೆ.

ಈದ್ಗಾಗಳಲ್ಲಿ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಲಾಗಿದೆ. ಎಲ್ಲ ಮುನ್ನೆಚ್ಚರಿಕೆ ಕೈಗೊಂಡು ಆಯಾ ಮಸೀದಿಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ.
ಒಂದು ವೇಳೆ ಅಧಿಕ ಜನಸಂಖ್ಯೆಯಲ್ಲಿ ಜನರು ನಮಾಜ್‍ಗೆ ಆಗಮಿಸಿದಲ್ಲಿ ಪಂಕ್ತಿಗಳಂತೆ ಮಾರ್ಗಸೂಚಿಗಳ ಅನುಸಾರ ನಮಾಜ್ ನಿರ್ವಹಿಸಬಹುದೆಂದು ಸರ್ಕಾರದ ನಿರ್ದೇಶನವಿದೆ ಎಂದು ಹೇಳಿದ್ದಾರೆ.

ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. 65 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ನಮಾಜ್ ಮಾಡುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು.
ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್‌ನಿಂದ ಶುಚಿಗೊಳಿಸಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡದಿರುವುದು ಒಳಿತು ಎಂದು ಸಚಿವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.