
ಬಸವಕಲ್ಯಾಣ: ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ಆಗ್ರಹಿಸಿ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ತಾಲ್ಲೂಕು ಘಟಕದಿಂದ ತಹಶೀಲ್ದಾರ್ ದತ್ತಾತ್ರಿ ಗಾದಾ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು.
ವಿಶ್ವವಿದ್ಯಾಲಯಕ್ಕೆ ಹೆಸರಿಡುವುದಕ್ಕಾಗಿ 35 ವರ್ಷಗಳಿಂದ ಹೋರಾಟ ನಡೆಸಲಾಗಿದ್ದು, ಈಗ ಇದಕ್ಕಾಗಿ ವಿಳಂಬ ಧೋರಣೆ ಸರಿಯಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ನಿಜ ಸಂಗತಿ ಹೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಅವರ ಕ್ಷೇತ್ರವಾದ ಚಿತ್ತಾಪುರದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಮ್ಮಿಕೊಳ್ಳುವ ಕಾರ್ಯಕ್ರಮಕ್ಕೆ ಷರತ್ತು ವಿಧಿಸಬೇಕು. ಇದಕ್ಕೂ ಮೀರಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಹ ಆಗ್ರಹಿಸಲಾಯಿತು.
ಸಮಿತಿ ತಾಲ್ಲೂಕು ಅಧ್ಯಕ್ಷ ಮಹಾದೇವ ಗಾಯಕವಾಡ, ಮುಖಂಡರಾದ ಮನೋಹರ ಮೈಸೆ, ಶೋಭಾ ಸೂರ್ಯವಂಶಿ, ಸಚಿನ್ ಬಸನಾಳೆ, ಇಂದುಮತಿ ಹಾಗೂ ಇತರೆ ಮಹಿಳಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.