ADVERTISEMENT

ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 12:18 IST
Last Updated 20 ನವೆಂಬರ್ 2019, 12:18 IST
ಹುಮನಾಬಾದ್‍ನ ಡಾ.ಬಿ.ಆರ್‌.ಅಂಬೇಡ್ಕರ್ ವೃತ್ತದಲ್ಲಿ ದಲಿತ ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು
ಹುಮನಾಬಾದ್‍ನ ಡಾ.ಬಿ.ಆರ್‌.ಅಂಬೇಡ್ಕರ್ ವೃತ್ತದಲ್ಲಿ ದಲಿತ ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು   

ಹುಮನಾಬಾದ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಸಿ ದಲಿತ ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್ ಕರೀಂ ಅವರಿಗೆ ಮನವಿ ಸಲ್ಲಿಸಿದರು.

ದಲಿತ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ವೀರಪ್ಪ ಧುಮನಸೂರ ಮಾತನಾಡಿ,‘ನಿರ್ದೇಶಕ ಮಣಿ, ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರು ಡಾ.ಅಂಬೇಡ್ಕರ್‌ ಅವರೊಬ್ಬರೇ ಸಂವಿಧಾನ ಬರೆದಿಲ್ಲ ಎನ್ನುವ ಅಂಶವನ್ನು ಒಳಗೊಂಡ ಕೈಪಿಡಿಯನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ’ ಎಂದರು.

ಇಡೀ ವಿಶ್ವವೇ ಡಾ.ಬಿ.ಆರ್‌.ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಕೊಂಡಾಡುತ್ತಿದೆ. ದೇಶಪ್ರೇಮ ಮತ್ತು ಅವರ ಅಗಾಧವಾದ ಮಾನವೀಯತೆಯನ್ನು ಅರಿಯದ ಸರ್ಕಾರ ರಾಜ್ಯದಲ್ಲಿ ಅಶಾಂತಿ ವಾತಾವರಣ ಮೂಡಿಸುತ್ತಿರುವುದು ಖಂಡನೀಯ ಎಂದರು.

ADVERTISEMENT

ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ ನಿರ್ದೇಶಕ, ಪ್ರಧಾನ ಕಾರ್ಯದರ್ಶಿಯನ್ನು ಸೇವೆಯಿಂದ ವಜಾಗೊಳಿಸಿ ಇದಕ್ಕೆ ಸಹಕರಿಸಿದ ಶಿಕ್ಷಣ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಹೇಳಿದರು.

ದಲಿತ ಸೇನೆ ತಾಲ್ಲೂಕು ಘಟಕದ ಉಪಾಧ್ಯಕ್ಷ ಸಿದ್ದು ಜಾನವೀರ, ನಗರ ಘಟಕದ ಅಧ್ಯಕ್ಷ ಅವಿನಾಶ ಬಿದ್ರಿ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಶಿವು ಜಾವೆ, ಶಿವರಾಜ ಸಾಗರ, ರಮೇಶ ದಿಗಡೆ, ಲೋಕೇಶ ಘಾಂಗ್ರೆ, ಜೈಭೀಮ ಮಿತ್ರಾ, ವಿನೋದ ಹಂದಿಕೇರಾ ಹಾಗೂ ಗೌತಮ ಸುಲ್ತಾನಾಬಾದ್‍ವಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.