ADVERTISEMENT

ಖರ್ಗೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ: ಸಂಜಯ್ ಜಾಗೀರದಾರ್

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 16:15 IST
Last Updated 27 ಜುಲೈ 2021, 16:15 IST
ಸಂಜಯ್ ಜಾಗೀರದಾರ್
ಸಂಜಯ್ ಜಾಗೀರದಾರ್   

ಬೀದರ್: ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷ ಮುಂದಿನ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಆಗ್ರಹಿಸಿದ್ದಾರೆ.

ಖರ್ಗೆ ಅವರು ಆರು ದಶಕಗಳ ಕಾಲ ಕಾಂಗ್ರೆಸ್ ಪಕ್ಷ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಆದರೂ, ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಹುದ್ದೆಗೆ ಹೆಸರು ಘೋಷಿಸಬೇಕಿಲ್ಲ. ಆ ಹುದ್ದೆಗೆ ಸರ್ವ ರೀತಿಯಿಂದಲೂ ಅರ್ಹರಾಗಿರುವ ಕಾರಣ ಅವರ ಹೆಸರು ಘೋಷಣೆ ಮಾಡಬೇಕು ಎಂದು ಹೇಳಿದ್ದಾರೆ.

ADVERTISEMENT

ಒಂಬತ್ತು ಬಾರಿ ಶಾಸಕ, ಎರಡು ಬಾರಿ ಸಂಸದ, ರಾಜ್ಯಸಭೆ ಸದಸ್ಯ, ರಾಜ್ಯ ಸಚಿವ ಹಾಗೂ ಕೇಂದ್ರ ಸಚಿವರಾಗಿ ದೇಶ ಹಾಗೂ ಕರ್ನಾಟಕಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ, ಬೀದರ್-ಬೆಂಗಳೂರು ಹೊಸ ರೈಲು, ಬೀದರ್- ಹೈದರಾಬಾದ್ ಇಂಟರ್‌ಸಿಟಿ ರೈಲು, ಕಲಬುರ್ಗಿಯ ಇಎಸ್‍ಐ ಆಸ್ಪತ್ರೆ, ಐಟಿ ಪಾರ್ಕ್, ಕೇಂದ್ರೀಯ ವಿಶ್ವವಿದ್ಯಾಲಯ ಮೊದಲಾದವು ಅವರ ಕೊಡುಗೆಗಳಾಗಿವೆ ಎಂದು ತಿಳಿಸಿದ್ದಾರೆ.

ಖರ್ಗೆ ಅವರ ಪಕ್ಷ ನಿಷ್ಠೆ ಮಾದರಿಯಾಗಿದೆ. ಅವರು ಎಂದೂ ಪಕ್ಷಕ್ಕೆ ದ್ರೋಹ ಬಗೆದಿಲ್ಲ. ಅಧಿಕಾರ ಇರಲಿ, ಬಿಡಲಿ ನಿರಂತರ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲ ಸಮುದಾಯಗಳನ್ನು ಒಟ್ಟಿಗೆ ಕರೆದೊಯ್ಯುವ ಗುಣ ಉಳ್ಳವರಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ಮುಂದಿನ ವಿಧಾನಸಭೆ ಚುನಾವಣೆಗೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.