ಬೀದರ್: ‘ಪ್ರಜಾಪ್ರಭುತ್ವದ ಆಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಸಂವಿಧಾನದ ಆಶಯದಂತೆ ನಾವೆಲ್ಲರೂ ಉತ್ತಮ ನಾಗರಿಕರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು’ ಎಂದರು.
ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠಲದಾಸ ಪ್ಯಾಗೆ ಮಾತನಾಡಿ,‘ರಾಜ್ಯ ಸರ್ಕಾರವು ‘ನಮ್ಮ ಮತ ನಮ್ಮ ಹಕ್ಕು’ ಘೋಷಣೆಯೊಂದಿಗೆ ಪ್ರಜಾಪ್ರಭುತ್ವ ದಿನ ಆಚರಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ನಾವೆಲ್ಲರೂ ಸಕ್ರಿಯವಾಗಿ ಭಾಗವಹಿಸುವುದು ಬಹಳ ಮುಖ್ಯವಾಗಿದೆ. ಆರ್ಥಿಕ ಅಸಮಾನತೆ ಹೋಗಲಾಡಿಸುವುದು, ಲಿಂಗ ಸಮಾನತೆ ಸಾಧಿಸುವುದು ಮತ್ತು ಇತರೆ ಸವಾಲುಗಳನ್ನು ಎದುರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯಶಸ್ವಿಗೊಳಿಸಬೇಕು’ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಚಿತ್ರಕಲೆ, ಭಾಷಣ, ಛಾಯಾಗ್ರಹಣ ಮತ್ತು ಇತರೆ ಸ್ಪರ್ಧೆಗಳಿಗೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅವರು ಪ್ರಜಾಪ್ರಭುತ್ವದ ಆಶಯ ಪ್ರತಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ರಮ್ಯಾ, ಡಿವೈಎಸ್‌ಪಿ ಶಿವನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರಕಾಶ ಸೂರ್ಯವಂಶಿ, ಸುಭಾಷ್ ನಾಗುರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಸುನಿತಾ ಶಿವಾನಂದ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ ಸೇರಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.