ADVERTISEMENT

ಬೀದರ್‌ | ಡೆಂಗಿ ಹೆಚ್ಚಳ; ‘ಮುನ್ನೆಚ್ಚರಿಕೆ ವಹಿಸಿ’

ಡೆಂಗಿ ನಿಯಂತ್ರಣ ಕುರಿತ ಅಧಿಕಾರಿಗಳ ವಿಡಿಯೊ ಸಂವಾದ: ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2023, 15:57 IST
Last Updated 14 ಅಕ್ಟೋಬರ್ 2023, 15:57 IST
ಗೋವಿಂದ ರೆಡ್ಡಿ
ಗೋವಿಂದ ರೆಡ್ಡಿ   

ಬೀದರ್‌: ‘ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಇದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಡೆಂಗಿ ನಿಯಂತ್ರಣ ಕುರಿತ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆ ನಡೆಸಿದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಡಿಸ್‌ ಜಾತಿಯ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಡೆಂಗಿ ಕಾಯಿಲೆ ಬರುತ್ತದೆ. ನೀರು ಸಂಗ್ರಹಿಸಿ ಇಡುವ ಸ್ಥಳಗಳಲ್ಲಿ ಈ ಸೊಳ್ಳೆ ಸಂತಾನ ಉತ್ಪತ್ತಿ ಮಾಡುತ್ತದೆ. ಮನೆ ಸುತ್ತಮುತ್ತ ಡ್ರಮ್‌, ಬ್ಯಾರಲ್‌, ನೀರಿನ ತೊಟ್ಟಿ ಸೇರಿದಂತೆ ಇತರೆ ಕಡೆಗಳಲ್ಲಿ ಹೆಚ್ಚು ದಿನಗಳವರೆಗೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಪ್ರತಿ ಎರಡ್ಮೂರು ದಿನಗಳಿಗೊಮ್ಮೆ ಸ್ವಚ್ಛಗೊಳಿಸಬೇಕು ಎಂದು ಸಲಹೆ ಮಾಡಿದರು.

ADVERTISEMENT

ಜಿಲ್ಲೆಯಲ್ಲಿ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಸ್ವಚ್ಛತೆ ಕಾಪಾಡಬೇಕು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಮಾತನಾಡಿ, ಜಿಲ್ಲೆಯ ಔರಾದ್‌ ತಾಲ್ಲೂಕಿನಲ್ಲಿ ಡೆಂಗಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ಡೆಂಗಿ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ ನೀರಗುಡಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.