ADVERTISEMENT

ಬೀದರ್‌ | ಬಗರ್‌ ಹುಕುಂ ಸಾಗುವಳಿ ಸಕ್ರಮಕ್ಕೆ ಆಗ್ರಹಿಸಿ ಧರಣಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 5:59 IST
Last Updated 19 ಜುಲೈ 2025, 5:59 IST
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಬೀದರ್‌ನ ತಹಶೀಲ್ದಾರ್‌ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಬೀದರ್‌ನ ತಹಶೀಲ್ದಾರ್‌ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು   

ಬೀದರ್‌: ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರು ಹಾಗೂ ಭೂಹೀನ ತಳ ಸಮುದಾಯದವರು ಉಳುಮೆ ಮಾಡುತ್ತಿರುವ ಬಗರ್‌ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ತಹಶೀಲ್ದಾರ್‌ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು.

‘ಪರಿಶಿಷ್ಟರ ಪಿಟಿಸಿಎಲ್‌ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಹೈಕೋರ್ಟ್‌ನಲ್ಲಿ ಪಿಟಿಸಿಎಲ್‌ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ಹಿರಿಯ ವಕೀಲರನ್ನು ನೇಮಿಸಿ, ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಬೆಂಗಳೂರಿನ ಕಾಡುಗೋಡಿಯಲ್ಲಿ ಪರಿಶಿಷ್ಟರಿಗೆ ಮಂಜೂರಾಗಿರುವ ಜಮೀನಿನಿಂದ ಒಕ್ಕಲೆಬ್ಬಿಸುತ್ತಿರುವುದು ನಿಲ್ಲಿಸಬೇಕು. ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್‌ ಠಾಣೆಗಳಿಗೆ ಅಗತ್ಯವಿರುವ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಾಲಯ, ಏಕಗವಾಕ್ಷಿ ಯೋಜನೆ ವ್ಯವಸ್ಥೆ ಜಾರಿಗೆ ತರಬೇಕು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳನ್ನು ಮೇಲ್ದರ್ಜೆಗೇರಿಸಿ, ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಪ್ರವೇಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಸಮಿತಿ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ, ಕಲಬುರಗಿ ವಿಭಾಗೀಯ ಸಂಘಟನಾ ಸಂಚಾಲಕ ರಾಜಕುಮಾರ ಬನ್ನೇರ್‌, ಜಿಲ್ಲಾ ಸಂಚಾಲಕ ರಮೇಶ್‌ ಮಂದಕನಳ್ಳಿ, ಆರ್‌ಪಿಐ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಗೋರನಾಳಕರ, ಪ್ರಮುಖರಾದ ಖಾನಾ ಮೈನೊದ್ದೀನ್‌, ಸುಭಾಷ ಜ್ಯೋತಿ, ಕೈಲಾಸ ಮೇಟಿ, ಝರೆಪ್ಪ ರಾಂಪೂರೆ, ಅಹಮ್ಮದ್‌ ಅಲಿಯಾಬಾದ್‌, ಸಂಜುಕುಮಾರ ಬ್ಯಾಗಿ, ನಾಗೇಂದ್ರ ಜನವಾಡ, ಬಸವರಾಜ ಕಾಂಬಳೆ, ರಂಜೀತಾ ಜೈನೂರ, ಜಗದೇವಿ ಕೆ. ಭಂಡಾರಿ, ರುಕ್ಮಿಣಿ ಕಾಂಬಳೆ ಮತ್ತಿತರರು ಪಾಲ್ಗೊಂಡಿದ್ದರು.

ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸದಿರಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಡಿಸಿಆರ್‌ಇ ಠಾಣೆಗೆ ಸೌಕರ್ಯಕ್ಕೆ ಒತ್ತಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.