ADVERTISEMENT

ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ: ಗ್ರಾ.ಪಂ ಮಟ್ಟದಲ್ಲಿ ನೇರ ಪ್ರಸಾರ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 15:10 IST
Last Updated 30 ಜೂನ್ 2020, 15:10 IST
ಬೀದರ್‌ನ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ
ಬೀದರ್‌ನ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ   

ಬೀದರ್: ಜುಲೈ 2ರಂದು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೋಳಿ ಹಾಗೂ ಸಲೀಂ ಅಹಮ್ಮದ್ ಅವರ ಪದಗ್ರಹಣ ಹಾಗೂ ಸಂವಿಧಾನ ಪೀಠಿಕೆ ಪ್ರಮಾಣ ವಚನ ಸಮಾರಂಭದ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.

ಪಂಚಾಯಿತಿ ಮಟ್ಟದಲ್ಲಿ ಈಗಾಗಲೇ ಎಲ್‍ಇಡಿ ಪರದೆಗಳನ್ನು ಅಳವಡಿಸಿದ್ದು, ಝೂಮ್ ಆ್ಯಪ್ ಬಳಸಿ ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದ ನೇರ ಪ್ರಸಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಜಿಲ್ಲೆಯಲ್ಲಿ ಸುಮಾರು 50 ಸಾವಿರ ಜನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಜಿಲ್ಲೆಯ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಒಂದು ವಾರದಿಂದ ನೇರ ಪ್ರಸಾರ ಸಿದ್ಧತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯವರೇ ಆಗಿರುವ ಮಾಜಿ ಸಚಿವ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರು ಎರಡನೇ ಅವಧಿಗೆ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ ಇತಿಹಾಸದಲ್ಲೇ ಅಪರೂಪದ ಪದಗ್ರಹಣ ಸಮಾರಂಭ ಇದಾಗಲಿದೆ. ಕೆಪಿಸಿಸಿಯ ನೂತನ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರು ರಾಜ್ಯದಲ್ಲಿ ಪಕ್ಷಕ್ಕೆ ನವಚೈತನ್ಯ ಒದಗಿಸಲಿದ್ದಾರೆ. ಪಕ್ಷವನ್ನು ಬೂತ್‍ಮಟ್ಟದಿಂದ ಬಲಗೊಳಿಸಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.

ಪಕ್ಷದ ಜಿಲ್ಲಾ ಘಟಕ, ಬ್ಲಾಕ್ ಕಾಂಗ್ರೆಸ್, ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನೇರ ಪ್ರಸಾರ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಬೇಕು ಎಂದುಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.