ADVERTISEMENT

ನಕಲಿ ಕ್ಲಿನಿಕ್, ಪ್ರಯೋಗಾಲಯ ವಿರುದ್ಧ ಕ್ರಮಕ್ಕೆ ಆಗ್ರಹ

ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 13:34 IST
Last Updated 18 ಆಗಸ್ಟ್ 2021, 13:34 IST
ಜಿಲ್ಲೆಯಲ್ಲಿರುವ ನಕಲಿ ಕ್ಲಿನಿಕ್ ಹಾಗೂ ಡೈಗ್ನೋಸ್ಟಿಕ್ ಲ್ಯಾಬ್‌ರೋಟರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೀದರ್‌ನ ಡಾ.ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಜಿಲ್ಲೆಯಲ್ಲಿರುವ ನಕಲಿ ಕ್ಲಿನಿಕ್ ಹಾಗೂ ಡೈಗ್ನೋಸ್ಟಿಕ್ ಲ್ಯಾಬ್‌ರೋಟರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೀದರ್‌ನ ಡಾ.ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು   

ಬೀದರ್‌: ಜಿಲ್ಲೆಯಲ್ಲಿರುವ ನಕಲಿ ಕ್ಲಿನಿಕ್ ಹಾಗೂ ಡೈಗ್ನೋಸ್ಟಿಕ್ ಲ್ಯಾಬ್‌ರೋಟರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು
ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದವು.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ), ಬಹುಜನ ಜಾಗೃತಿ ವೇದಿಕೆ, ವೀರ ಕನ್ನಡಿಗರ ಸೇನೆ, ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ಜಿಲ್ಲಾ ಘಟಕದ ಪದಾಧಿಕಾರಿಗಳು ಡಾ.ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ತನಿಖಾ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ನಕಲಿ ಕ್ಲಿನಿಕ್‌ಗಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಘಟನೆಗಳ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲೆಯಲ್ಲಿ ಕೆ.ಪಿ.ಎಂ.ಇ. ನೋಂದಣಿ ಮಾಡಿಕೊಳ್ಳದೆ ಅನಧಿಕೃತವಾಗಿ ಪ್ರಯೋಗಾಲಯಗಳು ನಡೆಯುತ್ತಿವೆ. ಕೆಲ ಪ್ರಯೋಗಾಲಯಗಳ ಹೆಸರು ಉಲ್ಲೇಖಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಆಗಸ್ಟ್ 7ರಂದು ದೂರು ನೀಡಲಾಗಿತ್ತು. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಪ್ರಯೋಗಾಲಯವೊಂದನ್ನು ಮುಚ್ಚಿಸಿದ್ದರು. ಈಗ ಅದು ಮತ್ತೆ ತೆರೆದುಕೊಂಡಿದೆ ಎಂದು ಹೇಳಿದರು.

ವೈದ್ಯಕೀಯ ಮಂಡಳಿ ಹಾಗೂ ಕೆ.ಪಿ.ಎಂ.ಇ. ನೋಂದಣಿ ಮಾಡಿಕೊಳ್ಳದೆ ಪ್ರಯೋಗಾಲಯ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಯೋಗಾಲಯಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಕ್ಲಿನಿಕ್‌ಗಳ ಮಾಲೀಕರಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಕಾನೂನು ಬಾಹಿರ ಚಟುವಟಿಕೆಗೆ ಬೆಂಬಲ ನೀಡುತ್ತಿರುವ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ವೀರ ಕನ್ನಡಿಗರ ಸೇನೆಯ ರಾಜ್ಯ ಸಂಚಾಲಕ ಸುಬ್ಬಣ್ಣ ಕರಕನಳ್ಳಿ, ವಿಶ್ವ ಕನ್ನಡಿಗರ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಮುಕೇಶ ಶಾಹಗಂಜ್, ಕೆಡಿಎಸ್‌ಎಸ್‌ನ ಸತೀಶ ವಗ್ಗೆ, ಗೌತಮ ಭೋಸ್ಲೆ, ಬಹುಜನ ಜಾಗೃತಿ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೋಳಕೆರೆ, ಉಪಾಧ್ಯಕ್ಷ ಜೈಭೀಮ ಕುರಬಖೇಳಗಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.