ADVERTISEMENT

ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ನಿರ್ಲಕ್ಷ್ಯ ಸಲ್ಲ: ಸಚಿವ ಪ್ರಭು ಚವಾಣ್

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 12:05 IST
Last Updated 20 ಜುಲೈ 2020, 12:05 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್: ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಬ್ರಿಮ್ಸ್ ನಿರ್ದೇಶಕರಿಗೆ ತಾಕೀತು ಮಾಡಿದರು.

ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‍ನಲ್ಲಿರುವ ಸಚಿವರು, ದೂರವಾಣಿ ಮೂಲಕ ವೈದ್ಯಾಧಿಕಾರಿ
ಗಳನ್ನು ಸಂಪರ್ಕಿಸಿ, ಆರೋಗ್ಯ ಇಲಾಖೆ ಕಾರ್ಯಚಟುವಟಿಕೆಗಳು ಹಾಗೂ ಕೋವಿಡ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದರು.

ಸೋಂಕಿತರಿಗೆ ಚಿಕಿತ್ಸೆ ಕೊಡಿಸುವುದು ಹಾಗೂ ಅವರಿಗೆ ಆಸ್ಪತ್ರೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ. ಈ ವಿಷಯದಲ್ಲಿ ನಿರ್ಲಕ್ಷ್ಯ ಸಹಿಸಲಾಗದು ಎಂದು
ಎಂದು ಎಚ್ಚರಿಕೆ ನೀಡಿದರು.

ADVERTISEMENT

ವೈದ್ಯರನ್ನು ನಂಬಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಯಾವುದೇ ರೀತಿಯ ಕೊರತೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಯಾರನ್ನೂ ತಾರತಮ್ಯದಿಂದ ಕಾಣಬಾರದು. ಪ್ರತಿಯೊಬ್ಬ ರೋಗಿಗೂ ಉತ್ತಮ ಚಿಕಿತ್ಸೆ ಲಭ್ಯವಾಗಬೇಕು ಎಂದು ಹೇಳಿದರು.

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ರೋಗಿಗಳಿಗೆ ಸಮಯಕ್ಕನುಗುಣವಾಗಿ ಔಷಧೋಪಚಾರ ನೀಡಬೇಕು. ಈ ಮೂಲಕ ರೋಗಿಗಳು ಶೀಘ್ರ ಗುಣಮುಖರಾಗಿ ಖುಷಿಯಿಂದ ಮರಳಿ ಮನೆಗೆ ಹೋಗುವಂತಹ ವಾತಾವರಣ ನಿರ್ಮಿಸಬೇಕು ಎಂದು ಸಚಿವರು ಸೂಚಿಸಿದರು.

ಶುದ್ಧ ಕುಡಿಯುವ ನೀರಿನ ಸಮಸ್ಯೆ, ಶೌಚಗೃಹ, ಸ್ನಾನ ಗ್ರಹದ ಸಮಸ್ಯೆ ಬಗ್ಗೆ ಆರೋಪ ಬರುತ್ತಿವೆ. ವೈದ್ಯರು ಸಹ ನಿಯಮಿತವಾಗಿ ಐಸೋಲೇಷನ್ ವಾಡ್9ಗೆ ಬಂದು ರೋಗಿಗಳ ತಪಾಸಣೆ ಮಾಡುತ್ತಿಲ್ಲ ಎಂಬ ದೂರು ಸಹ ಬರುತ್ತಿವೆ. ಈ ವಿಷಯ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಹೊಸ ರೋಗಿಗಳು ಮತ್ತು ಪ್ರಾಥಮಿಕ ಸಂಪರ್ಕಿತರ ಪತ್ತೆ ಕಾರ್ಯ ಚುರುಕಾಗಿ ನಡೆಯಬೇಕು. ಸಹಾಯವಾಣಿಗೆ ಬರುವ ಕರೆಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಜಿಲ್ಲೆಯ ಎಲ್ಲೆಡೆ ಆ್ಯಂಬುಲೆನ್ಸ್‍ಗಳು ಸಜ್ಜಾಗಿರುವಂತೆ ನೋಡಿಕೊಳ್ಳಬೇಕು.ಸೋಂಕಿತರು ಮೃತಪಟ್ಟರೆ ನಿಯಮದಂತೆ ಶವ ಸಂಸ್ಕಾರ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್‌ ಆರಂಭಿಸಬೇಕು. ಲಕ್ಷಣ ರಹಿತ ಸೋಂಕಿತರಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು. ವಾರದೊಳಗೆ ಎಲ್ಲ ತಾಲೂಕಿನಲ್ಲಿ ಈ ಸೇವೆ ಆರಂಭಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಕೋವಿಡ್ 19 ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿಯನ್ನು ಸಹ ಹೊರಡಿಸಿದೆ. ಇದರಂತೆ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಬೇಗ ನಿಯಮಾನುಸಾರ ಚಿಕಿತ್ಸೆ ನೀಡುವುದು ಆರಂಭಿಸುವಂತೆ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.

ಆದಷ್ಟು ಬೇಗ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಸಿಗಲಿದೆ. ಸಾರ್ವಜನಿಕರು ಕೊರೊನಾ ಬಗ್ಗೆ ಯಾವುದೇ ಕಾರಣಕ್ಕೆ ಅನಗತ್ಯವಾಗಿ ಆತಂಕಪಡುವ ಅಗತ್ಯವಿಲ್ಲ. ಪ್ರತಿಯೊಬ್ಬರೂ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವ ಮೂಲಕ ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.