ADVERTISEMENT

ಡಾ. ಶೈಲೇಂದ್ರಗೆ ಒಲಿದ ಕೈಗಾರಿಕಾ ನಿಗಮ ಅಧ್ಯಕ್ಷ ಪಟ್ಟ

ಗಡಿ ಜಿಲ್ಲೆ ಬೀದರ್‌ಗೂ ದೊರಕಿದ ಪ್ರಾತಿನಿಧ್ಯ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 17:45 IST
Last Updated 25 ನವೆಂಬರ್ 2020, 17:45 IST
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಡಾ.ಶೈಲೇಂದ್ರ ಬೆಲ್ದಾಳೆ ಅವರಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಬೆಂಗಳೂರಿನಲ್ಲಿ ಬುಧವಾರ ಪುಷ್ಪಗುಚ್ಛ ನೀಡಿ ಶುಭ ಕೋರಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪದ್ಮಾಕರ್ ಪಾಟೀಲ, ಬಾಬುರಾವ್ ಕಾರಬಾರಿ ಇದ್ದಾರೆ
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಡಾ.ಶೈಲೇಂದ್ರ ಬೆಲ್ದಾಳೆ ಅವರಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಬೆಂಗಳೂರಿನಲ್ಲಿ ಬುಧವಾರ ಪುಷ್ಪಗುಚ್ಛ ನೀಡಿ ಶುಭ ಕೋರಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪದ್ಮಾಕರ್ ಪಾಟೀಲ, ಬಾಬುರಾವ್ ಕಾರಬಾರಿ ಇದ್ದಾರೆ   

ಬೀದರ್: ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಪಟ್ಟ ಒಲಿದು ಬಂದಿದೆ.

ಬೆಲ್ದಾಳೆ ಅವರನ್ನು ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದ್ದು, ನಿಗಮ, ಮಂಡಳಿ ನೇಮಕದಲ್ಲಿ ಗಡಿ ಜಿಲ್ಲೆಗೂ ಪ್ರಾತಿನಿಧ್ಯ ದೊರಕಿದೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆಗುವುದರೊಂದಿಗೆ ರಾಜಕೀಯ ಪಯಣ ಆರಂಭಿಸಿದ ಬೆಲ್ದಾಳೆ, 15 ವರ್ಷಗಳ ಅವಧಿಯಲ್ಲಿ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ.

ADVERTISEMENT

ಜಿಲ್ಲಾ ಘಟಕದ ಖಜಾಂಚಿ, ಉಪಾಧ್ಯಕ್ಷ ಹಾಗೂ ಅಧ್ಯಕ್ಷರಾಗಿ ಪಕ್ಷದ ಸಂಘಟನೆ ಬಲಪಡಿಸಲು ಶ್ರಮಿಸಿದ್ದಾರೆ. 2010 ರಲ್ಲಿ ಜಿಲ್ಲಾ ಪಂಚಾಯಿತಿಯ ಚಿಟ್ಟಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಲ್ಲಿ ಗುರುತಿಸಿಕೊಂಡಿದ್ದಾರೆ. ಯಡಿಯೂರಪ್ಪ ಅವರು ಹಿಂದೆ ಬಿಜೆಪಿ ತೊರೆದು ಕೆಜೆಪಿ ರಚಿಸಿದಾಗ, ಕೆಜೆಪಿಗೆ ಸೇರಿದ್ದರು. 2013 ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ನಂತರ ಯಡಿಯೂರಪ್ಪ ಅವರು ಬಿಜೆಪಿಗೆ ಮರಳಿದಾಗ ಇವರೂ ವಾಪಸ್ಸಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಎರಡನೇ ಬಾರಿಗೆ ಬೀದರ್ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಶಸ್ಸು ಲಭಿಸಿರಲಿಲ್ಲ. ಇದೀಗ ಅವರಿಗೆ ಪಕ್ಷ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಸ್ಥಾನದಂತಹ ಮಹತ್ವದ ಹುದ್ದೆಯನ್ನು ನೀಡಿದೆ.

ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಖುಷಿ ತಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಮೇಲೆ ವಿಶ್ವಾಸ ಇರಿಸಿ ನೇಮಕ ಮಾಡಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ತರದಂತೆ ಕಾರ್ಯ ನಿರ್ವಹಿಸುವೆ ಎಂದು ಡಾ. ಶೈಲೇಂದ್ರ ಬೆಲ್ದಾಳೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ನಿಗಮದ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಲಾಗುವುದು. ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ತಿಳಿಸಿದರು.

ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ ಬೀದರ್ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಿ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.