ADVERTISEMENT

ಅಭಿವೃದ್ಧಿ ಕಾಮಗಾರಿ ತ್ವರಿತ ಅನುಷ್ಠಾನಗೊಳಿಸಿ: ಶಿವಯ್ಯ ಸ್ವಾಮಿ

ಅಧಿಕಾರಿಗಳಿಗೆ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 12:42 IST
Last Updated 1 ಅಕ್ಟೋಬರ್ 2022, 12:42 IST
ಬೀದರ್‌ನಲ್ಲಿ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ ಅವರೊಂದಿಗೆ ಚರ್ಚೆ ನಡೆಸಿದರು
ಬೀದರ್‌ನಲ್ಲಿ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ ಅವರೊಂದಿಗೆ ಚರ್ಚೆ ನಡೆಸಿದರು   

ಬೀದರ್: ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ನಿರ್ದೇಶನ ನೀಡಿದರು.

ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ. ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಅವರು ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ನಡೆದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಸಮಿತಿಯ ಅಧ್ಯಕ್ಷರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಲು ಸದಸ್ಯರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

ಸರ್ಕಾರದ ಆಶಯ ಈಡೇರಿಕೆಗೆ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯ ನಿರ್ವಹಿಸಬೇಕಿದೆ. ಕಾರಣ, ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಮಟ್ಟದ ಅನುಷ್ಠಾನ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ತಿಳಿಸಿದರು.

ADVERTISEMENT

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಜಲ ಜೀವನ್ ಮಿಷನ್ ಯೋಜನೆ, ಮಧ್ಯಾಹ್ನದ ಬಿಸಿಯೂಟ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಹೇಳಿದರು.

ಸಮಿತಿ ಸಲಹೆ, ಮಾರ್ಗದರ್ಶನದೊಂದಿಗೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಶಿಲ್ಪಾ ಎಂ. ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಮುಖ್ಯ ಯೋಜನಾಧಿಕಾರಿ ಶರಣಯ್ಯ ಮಠಪತಿ, ಸಹಾಯಕ ಕಾರ್ಯದರ್ಶಿ(ಅಭಿವೃದ್ಧಿ) ಬಾಲಾಜಿ ಕೋಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವ್ಯವಸ್ಥಾಪಕ ಮಕರಂದ ಕುಲಕರ್ಣಿ, ಲೆಕ್ಕ ಸಹಾಯಕ ಪ್ರವೀಣ್ ಸ್ವಾಮಿ, ಜೆಸ್ಕಾಂ ಜಾಗೃತ ದಳದ ರೇವಣಸಿದ್ದಯ್ಯ ಸ್ವಾಮಿ, ವಸತಿ ನೋಡಲ್ ಅಧಿಕಾರಿ ಗುರುರಾಜ ಎಸ್. ಮೂಲಗೆ, ಸಮಾಲೋಚಕರಾದ ಮಂಜುಳಾ, ಅಂಬಿಕಾ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.