ADVERTISEMENT

ನೈಜ ಅಸ್ಪೃಶ್ಯರಿಗೆ ಸೌಲಭ್ಯ ಒದಗಿಸಿ

ಸ್ಪೃಶ್ಯ ಜಾತಿಗಳನ್ನು ಪರಿಶಿಷ್ಟರ ಪಟ್ಟಿಯಿಂದ ಕೈಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 14:11 IST
Last Updated 11 ಜುಲೈ 2020, 14:11 IST
ಭೂಸುಧಾರಣಾ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಮನವಿಪತ್ರ ಸಲ್ಲಿಸಿದರು
ಭೂಸುಧಾರಣಾ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಮನವಿಪತ್ರ ಸಲ್ಲಿಸಿದರು   

ಬೀದರ್: ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಿ ಪರಿಶಿಷ್ಟ ಜಾತಿ ಪಟ್ಟಿಯಿಂದ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ತೆಗೆದು ಹಾಕಿ ನಿಜವಾದ ಅಸ್ಪೃಶ್ಯರಿಗೆ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಆಗ್ರಹಿಸಿದೆ.

ಹಿಂದೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸ ಅವರು ಸ್ಪರ್ಶ ಜಾತಿಗಳನ್ನು ಪರಿಶಿಷ್ಟರ ಪಟ್ಟಿಗೆ ಸೇರಿಸುವ ಮೂಲಕ ಅಸ್ಪೃಶ್ಯರಿಗೆ ಅನ್ಯಾಯ ಮಾಡಿದ್ದಾರೆ. ಅಸ್ಪೃಶ್ಯರ ಎಲ್ಲ ಸೌಲಭ್ಯಗಳನ್ನು ಲಂಬಾಣಿ, ಭೋವಿ, ಕೊರಮ, ಕೊರಚ ಸಮುದಾಯದವರು ಕಬಳಿಸುವಂತೆ ಮಾಡಿದ್ದಾರೆ. ನಿಜವಾದ ಅಸ್ಪೃಶ್ಯರಿಗೆ ಸೌಲಭ್ಯಗಳು ಸಿಗುತ್ತಿಲ್ಲ ಎಂದು ದೂರಿದ್ದಾರೆ.

ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಈ ನಾಲ್ಕು ಸಮುದಾಯಗಳು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಲ್ಲ. ಪರಿಶಿಷ್ಟರ ಪಟ್ಟಿಯಲ್ಲಿರುವ ಸ್ಪೃಶ್ಯ ಜಾತಿಗಳ ಮುಖಂಡರು ರಾಜಕೀಯ ಅಧಿಕಾರ ಹಿಡಿದುಕೊಂಡು ತಮ್ಮ ಸಮುದಾಯಕ್ಕೆ ಅನುಕೂಲವಾಗುವ ರೀತಿಯಲ್ಲಿ ನೀತಿ ನಿರೂಪಣೆಗಳನ್ನು ಮಾಡಿಕೊಳ್ಳಲು ರಾಜಕೀಯ ಪಕ್ಷಗಳ ಮೇಲೆ ಒತ್ತಡ ಹಾಕುತ್ತಿರುವುದು ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಅಸ್ಪೃಶ್ಯರ ಮಕ್ಕಳು ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎನ್ನುವುದು ವೃತ್ತಿಪರ ಕೋರ್ಸ್‌ಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅವಲೋಕಿಸಿದರೆ ಸ್ಪಷ್ಟವಾಗಿ ಗೊತ್ತಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಸ್ಪೃಶ್ಯ ಜಾತಿಯವರೇ ಪರಿಶಿಷ್ಟರ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಗುತ್ತಿಗೆ ಕಾಮಗಾರಿ, ಸರ್ಕಾರ ವಿವಿಧ ಯೋಜನೆಗಳ ಅಡಿಯಲ್ಲಿ ಸಾಲಸೌಲಭ್ಯ, ವಸತಿ ಯೋಜನೆಗಳಿಂದ ಅಸ್ಪೃಶ್ಯರು ವಂಚಿತರಾಗುತ್ತಿದ್ದಾರೆ ಎಂದು ದೂರಿದ್ದಾರೆ.

ರಾಜಕೀಯ ಪಕ್ಷಗಳು ರಾಜಕೀಯ ಲಾಭ ಪಡೆದುಕೊಳ್ಳಲು ಅಸ್ಪೃಶ್ಯರಲ್ಲದವರನ್ನು ಪರಿಶಿಷ್ಟರ ಪಟ್ಟಿಗೆ ಸೇರಿಸಿ ಅಸ್ಪೃಶ್ಯರಿಗೆ ಅನ್ಯಾಯ ಮಾಡಿವೆ. ಅಸ್ಪೃಶ್ಯರಲ್ಲದಿದ್ದರೂ ಕೆಲವರು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಕಾರಣಕ್ಕೆ ಜಾತಿ ನಿಂದನೆ ಕಾನೂನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದೇ ಕಾನೂನನ್ನು ದುರ್ಬಲಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗುತ್ತಲೇ ಬಂದಿರುವ ಶೋಷಿತ ಸಮುದಾಯದ ಅಭಿವೃದ್ಧಿಯಾಗಬೇಕಬೇಕಾದರೆ ಪರಿಶಿಷ್ಟರ ಪಟ್ಟಿಯಲ್ಲಿ ಕೇವಲ ಅಸ್ಪೃಶ್ಯ ಜಾತಿಗಳನ್ನು ಮಾತ್ರ ಉಳಿಸಿಕೊಳ್ಳಬೇಕು. ಸುಪ್ರೀಂ ಕೋರ್ಟ್ ಆದೇಶಕ್ಕೆ ಗೌರವ ನೀಡಿ ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬರೆದ ಮನವಿಪತ್ರದಲ್ಲಿ ತಿಳಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಜಿಲ್ಲಾ ಸಂಚಾಲಕ ಉಮೇಶಕುಮಾರ ಸ್ವಾರಳ್ಳಿಕರ್, ಜಿಲ್ಲಾ ಸಂಘಟನಾ ಸಂಚಾಲಕ ನರಸಿಂಗ್ ಸಾಮ್ರಾಟ, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ಬಸವರಾಜ ಉಜ್ವಲೆ, ದಿಲೀಪ ದೊಡ್ಡಮನಿ, ದಯಾನಂದ ನವಲೆ ಅವರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಕಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.