ADVERTISEMENT

ರಾಜ್ಯ ರೈತ ಸಂಘದಿಂದ ಪ್ರತಿಭಟನೆ

ಟನ್ ಕಬ್ಬಿಗೆ ₹ 2 ಸಾವಿರ ಬೆಲೆ ಪಾವತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 9:23 IST
Last Updated 19 ಏಪ್ರಿಲ್ 2019, 9:23 IST
ಬೀದರ್‌ನಲ್ಲಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು
ಬೀದರ್‌ನಲ್ಲಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬೀದರ್: ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್‌ಗೆ ₹ 2 ಸಾವಿರ ಬೆಲೆ ಪಾವತಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಘೋಷಣೆ ಕೂಗಿದ ಕಾರ್ಯಕರ್ತರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ನಿಯಮಾನುಸಾರ ಕಾರ್ಖಾನೆಗೆ ಕಬ್ಬು ಸಾಗಿಸಿದ 15 ದಿನಗಳ ಒಳಗೆ ಹಣ ಸಂದಾಯ ಮಾಡಬೇಕು. ಆದರೆ, ನಾಲ್ಕು ತಿಂಗಳು ಕಳೆದರೂ ಕಾರ್ಖಾನೆಯವರು ಹಣ ಪಾವತಿಸಿಲ್ಲ ಎಂದು ಆರೋಪಿಸಿದರು.

ADVERTISEMENT

ಬೆಂಬಲ ಬೆಲೆಯಲ್ಲಿ ಸರ್ಕಾರ ಉದ್ದು, ಹೆಸರು ಖರೀದಿ ಮಾಡಿ ಏಳು ತಿಂಗಳಾದರೂ ಹಣ ಜಮಾ ಮಾಡಿಲ್ಲ ಎಂದು ದೂರಿದರು.
ಬೆಂಬಲ ಬೆಲೆಯಲ್ಲಿ ತೊಗರಿ ಮಾರಾಟ ಮಾಡಿದ ರೈತರಿಗೆ ಕೂಡಲೇ ಹಣ ಪಾವತಿ ಮಾಡಬೇಕು. ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರ ಕೊಡಬೇಕು. ರೈತರಿಗೆ ಬರ ಪರಿಹಾರ ನೀಡಬೇಕು. ಬರಗಾಲದ ಕಾರಣ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನದಂತೆ ರೈತರ ಮಧ್ಯಮಾವಧಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಸಹಕಾರ ಬ್ಯಾಂಕ್‌ಗಳಲ್ಲೂ ಬಡ್ಡಿ ಮನ್ನಾ ಮಾಡಬೇಕು. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಕೂಡಲೇ ಸಂಘದ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ವಿಶ್ವನಾಥ ಪಾಟೀಲ ಕೌಠಾ, ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಕಾರ್ಯದರ್ಶಿ ಶಿವಾನಂದ ಹುಡಗಿ, ತಾಲ್ಲೂಕು ಘಟಕದ ಅಧ್ಯಕ್ಷ ವಿಠ್ಠಲರೆಡ್ಡಿ ಆಣದೂರ, ಕಾಸಿಂ ಅಲಿ, ಕೊಂಡಿಬಾರಾವ್ ಪಾಂಡ್ರೆ, ಬಾಬುರಾವ್ ಜೊಳದಾಪಕಾ, ಸಿದ್ರಾಮಪ್ಪ ಆಣದೂರೆ, ಶೋಭಾವತಿ ಕಾರಬಾರಿ, ಶಾಂತಾಬಾಯಿ ಮೂಲಗೆ, ಬಸವರಾಜ ಅಷ್ಟೂರ, ಸತೀಶ ನನ್ನೂರೆ, ಶ್ರೀಮಂತ ಬಿರಾದಾರ, ಶೇಷರಾವ್ ಕಣಜಿ, ಸುಧಾಕರ ಬೋಬಡೆ, ಗುರುಲಿಂಗಪ್ಪ ಮೇಲ್ದೊಡ್ಡಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.