ಬೀದರ್: ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬೀದರ್ ತಾಲ್ಲೂಕಿನ ಜಾಂಪಾಡ, ಚಿಲ್ಲರಗಿ, ಇಸ್ಲಾಂಪುರ, ಯರನಳ್ಳಿ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ‘ಭಾರಿ ಮಳೆಯಿಂದಾಗಿ ರೈತರ ಹೊಲಗಳಲ್ಲಿ ಬೆಳಯಲಾದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ವಿವಿಧ ಸ್ಥಳಗಳಲ್ಲಿ ಮನೆಗಳು, ರಸ್ತೆ, ಸೇತುವೆ ಕುಸಿದಿವೆ. ರಸ್ತೆ ಸಂಪರ್ಕ ಕಡಿತಗೊಂಡಿವೆ. ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗಿದೆ’ ಎಂದರು.
‘ಅಧಿಕಾರಿಗಳಿಗೆ ತುರ್ತು ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದಿಂದ ಹೆಚ್ಚುವರಿ ₹8,500 ಪ್ರತಿ ಹೆಕ್ಟೇರ್‌ಗೆ ಪರಿಹಾರ ಸೇರಿದಂತೆ ಒಟ್ಟು ₹17,000 ಖುಷ್ಕಿ ಜಮೀನಿಗೆ, ₹25,000 ನೀರಾವರಿ ಜಮೀನಿಗೆ ಹಾಗೂ ₹31,000 ಬಹುವಾರ್ಷಿಕ ಬೆಳೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.
ಸಾರ್ವಜನಿಕರು ನದಿ, ಕೆರೆಗಳಿಂದ ದೂರ ಇರಬೇಕು. ಯಾವುದೇ ಅಪಾಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಪಾಲಿಕೆ ಅಧ್ಯಕ್ಷ ಮುಹಮ್ಮದ್ ಗೌಸ್, ಬೀದರ್ ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ, ತೋಟಗಾರಿಕೆ, ಕಂದಾಯ ಇಲಾಖೆ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.