ADVERTISEMENT

ಮಹಾತ್ಮರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿ: ಶಾಸಕ ರಹೀಂಖಾನ್

ಸವಿತಾ ಮಹರ್ಷಿ ಜಯಂತಿ ಆಚರಣೆ: ಶಾಸಕ ರಹೀಂಖಾನ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 15:47 IST
Last Updated 30 ಜನವರಿ 2023, 15:47 IST
ಬೀದರ್‌ನ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಕುಂಚುರು ಮಠದ ಸವಿತಾನಂದ ಸ್ವಾಮೀಜಿ ಮಾತನಾಡಿದರು
ಬೀದರ್‌ನ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಕುಂಚುರು ಮಠದ ಸವಿತಾನಂದ ಸ್ವಾಮೀಜಿ ಮಾತನಾಡಿದರು   

ಬೀದರ್: ಮಹಾತ್ಮರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕು ಎಂದು ಶಾಸಕ ರಹೀಂಖಾನ್ ಹೇಳಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮರ ಜಯಂತಿ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ನಿತ್ಯ ಅವರ ತತ್ವಗಳ ಪಾಲನೆ ಆಗಬೇಕು ಎಂದರು.
ಸವಿತಾ ಸಮಾಜದ ಸೇವೆ ಶ್ರೇಷ್ಠವಾಗಿದೆ. ಅದನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ ಎಂದು ನುಡಿದರು.

ADVERTISEMENT

ಸವಿತಾ ಸಮಾಜದವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಸಮಾಜಕ್ಕೆ ಅಗತ್ಯ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ಸವಿತಾ ಸಮಾಜದವರು ಸಂಘಟಿತರಾಗಬೇಕು. ಈ ಮೂಲಕ ತಮ್ಮ ಏಳಿಗೆಗೆ ಶ್ರಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.

ಕುಂಚುರು ಮಠದ ಸವಿತಾನಂದ ಸ್ವಾಮೀಜಿ ಮಾತನಾಡಿ, ಸವಿತಾ ಸಮಾಜದ ಬಗ್ಗೆ ಕೆಲವರು ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ನಿಲ್ಲಿಸಬೇಕು. ಸಮಾಜದವರು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸವಿತಾ ಸಮಾಜಕ್ಕೆ ಸರ್ಕಾರ ಭೂಮಿ ಒದಗಿಸಬೇಕು ಎಂದು ಒತ್ತಾಯಿಸಿದರು.

ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಗಿರಿಧರ ಬಿ.ಎಚ್. ಅವರು ಸವಿತಾ ಮಹರ್ಷಿ ಅವರ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜಿ.ಎನ್. ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗೌತಮ ಅರಳಿ, ನಗರಸಭೆ ಸದಸ್ಯ ದಿಗಂಬರ ಮಡಿವಾಳ, ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷ ಉಮೇಶ ಗೊಂದೆಗಾಂವ್, ಹಿರಿಯ ಉಪಾಧ್ಯಕ್ಷ ನಾಗರಾಜ ಆರ್ಯ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.