ADVERTISEMENT

30 ಮಕ್ಕಳಿಗೆ 10ನೇ ತರಗತಿವರೆಗೆ ವಸತಿ ಸಹಿತ ಉಚಿತ ಶಿಕ್ಷಣ

ಮಾ.2 ರಂದು ಗುರುಕುಲದಲ್ಲಿ ಪ್ರವೇಶ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 4:48 IST
Last Updated 27 ಫೆಬ್ರುವರಿ 2024, 4:48 IST
ಬಸವಲಿಂಗ ಪಟ್ಟದ್ದೇವರು
ಬಸವಲಿಂಗ ಪಟ್ಟದ್ದೇವರು   

ಭಾಲ್ಕಿ: ಹಿರೇಮಠ ಸಂಸ್ಥಾನ ವಿದ್ಯಾಪೀಠ ಆರಂಭದ 30ನೇ ವರ್ಷದ ಸವಿ ನೆನಪಿಗಾಗಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಯ ಪ್ರತಿಭಾವಂತ 30 ಮಕ್ಕಳಿಗೆ ವಸತಿ ಸಹಿತ ಉಚಿತ ಶಿಕ್ಷಣ, ತರಬೇತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದರು.

ಪಟ್ಟಣದ ಹಿರೇಮಠದಲ್ಲಿ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.2 ರಂದು ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಈ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆಯುವ 30 ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಉಚಿತ ಶಿಕ್ಷಣ ಸೇರಿದಂತೆ ಎಲ್ಲ ಸೌಲಭ್ಯ ನೀಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಆನ್‍ಲೈನ್ ನೋಂದಣಿ ಮಾಡಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ. ಕನ್ನಡ ನೆಲ, ಭಾಷೆ ರಕ್ಷಣೆಗಾಗಿ ಶ್ರೀಮಠ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿದೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಸಂಸ್ಥೆ ತೆರೆದು ಕನ್ನಡ ಭಾಷೆ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಆಂಗ್ಲ ಭಾಷೆ ಕಲಿತರೆ ಮಾತ್ರ ಭವಿಷ್ಯ ಎನ್ನುವ ಮಾತು ಕೇಳಿ ಬರುತ್ತಿವೆ. ನಮ್ಮ ಸಂಸ್ಥೆಯಲ್ಲಿ ಇದು ವರೆಗೂ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಮೆಡಿಕಲ್, ಎಂಜಿನಿಯರಿಂಗ್, ಎನ್‍ಡಿಎ, ಐಐಟಿ, ಐಆರ್‍ಎಸ್ ಸೇರಿ ವಿವಿಧ ಕೋರ್ಸ್‌ಗಳಿಗೆ ಆಯ್ಕೆಯಾಗಿ ತಮ್ಮ ಭವಿಷ್ಯವನ್ನು ರೂಪಿಸಿ ಕೊಂಡಿದ್ದಾರೆ ಎಂದರು.

ADVERTISEMENT

ಕನ್ನಡ ಮಾಧ್ಯಮ ಆಂಗ್ಲ ಮಾಧ್ಯಮಕ್ಕಿಂತ ಗಟ್ಟಿ ಎನ್ನುವುದನ್ನು ಪಾಲಕರಿಗೆ ತಿಳಿ ಹೇಳುವುದರ ಜತೆಗೆ ಬಡತನ, ಆರ್ಥಿಕ ಸಮಸ್ಯೆ ಪ್ರತಿಭಾವಂತ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು ನಮ್ಮ ಸಂಸ್ಥೆಯ ಉದ್ದೇಶ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪರೀಕ್ಷೆ ಬರೆದು ಉಚಿತ ಶಿಕ್ಷಣ ಯೋಜನೆಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ತಿಳಿಸಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಸವಲಿಂಗ ಪಟ್ಟದ್ದೇವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಲ್ಲಿ ಸೇವಾ ಮನೋಭಾವದಿಂದ ಶಿಕ್ಷಣ ನೀಡಲಾಗುತ್ತಿದೆ. ಹಿಂದಿನಿಂದಲೂ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ, ನೆರವು ನೀಡಲಾಗುತ್ತಿದೆ. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೂ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, 6ನೇ ತರಗತಿ ಪ್ರವೇಶ ಬಯಸುವ ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು. ಆನ್ ಲೈನ್ ನೋಂದಣಿಗೆ ತಾಂತ್ರಿಕ ಸಮಸ್ಯೆಯ ತೊಡಕು ಉಂಟಾದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ದಿನದಂದು ಆಧಾರ್ ಕಾರ್ಡ್ ಝೆರಾಕ್ಸ್ ಪ್ರತಿ, 2 ಪಾಸ್ ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ನೇರವಾಗಿ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ಇದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7353304506ಗೆ ಕರೆ ಮಾಡಬೇಕು ಎಂದು ಹೇಳಿದರು.

ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಲಕ್ಷ್ಮಣ ಮೇತ್ರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.