ADVERTISEMENT

16 ರಿಂದ ಸಚಿವರ ಕಚೇರಿ ಎದುರು ಧರಣಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 14:41 IST
Last Updated 8 ಆಗಸ್ಟ್ 2021, 14:41 IST


ಬೀದರ್: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಹಣ ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗಸ್ಟ್ 16 ರಿಂದ ಇಲ್ಲಿಯ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿವೆ.

ಕಬ್ಬು ಬಾಕಿ ಹಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಅವರ ನೇತೃತ್ವದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರನ್ನು ಭೇಟಿ ಮಾಡಿ ಗಮನ ಸೆಳೆಯಲಾಗಿದೆ. ಆದರೆ, ಅವರು ಹಾರಿಕೆ ಉತ್ತರ ನೀಡಿದ ಪ್ರಯುಕ್ತ ಅಹೋರಾತ್ರಿ ಧರಣಿಗೆ ನಿರ್ಧರಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನವರಿ 2 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ 2020-2021ನೇ ಸಾಲಿನಲ್ಲಿ ರೈತರು ಪೂರೈಸುವ ಪ್ರತಿ ಟನ್ ಕಬ್ಬಿಗೆ₹ 2,400 ಬೆಲೆ ಪಾವತಿಸುವುದಾಗಿ ಎಲ್ಲ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಒಪ್ಪಿಕೊಂಡಿದ್ದರು. ಆದರೆ, ಪ್ರತಿ ಟನ್‍ಗೆ₹ 1,950 ಮಾತ್ರ ಸಂದಾಯ ಮಾಡಲಾಗಿದೆ. ಉಳಿದ ಹಣಕ್ಕಾಗಿ ಸರ್ಕಾರ, ಜಿಲ್ಲಾ ಆಡಳಿತ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಲಿಖಿತ ಮನವಿ ಪತ್ರ ಸಲ್ಲಿಕೆ ಹಾಗೂ ಮೌಖಿಕ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.