ADVERTISEMENT

ಸರ್ಕಾರಿ ನೌಕರರ ಕ್ರೀಡಾಕೂಟ ಶೀಘ್ರ

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 1:32 IST
Last Updated 17 ಜನವರಿ 2021, 1:32 IST
ಬೀದರ್‌ನಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ 2021ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ರಾಜೇಂದ್ರಕುಮಾರ ಗಂದಗೆ, ರುದ್ರೇಶ ಘಾಳಿ, ರಾಜಶೇಖರ ಮಂಗಲಗಿ, ಅಶೋಕ ರೆಡ್ಡಿ, ರಾಜಕುಮಾರ ಬೇಲೂರೆ, ಯೋಗೇಂದ್ರ ಯದಲಾಪುರೆ ಇದ್ದರು
ಬೀದರ್‌ನಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ 2021ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ರಾಜೇಂದ್ರಕುಮಾರ ಗಂದಗೆ, ರುದ್ರೇಶ ಘಾಳಿ, ರಾಜಶೇಖರ ಮಂಗಲಗಿ, ಅಶೋಕ ರೆಡ್ಡಿ, ರಾಜಕುಮಾರ ಬೇಲೂರೆ, ಯೋಗೇಂದ್ರ ಯದಲಾಪುರೆ ಇದ್ದರು   

ಬೀದರ್: ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ರಾಜ್ಯ ಸರ್ಕಾರಿ ನೌಕರರ ಮನರಂಜನೆಗಾಗಿ ಶೀಘ್ರದಲ್ಲಿಯೇ ಜಿಲ್ಲಾಮಟ್ಟದ ಕ್ರೀಡಾಕೂಟ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ 2021ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಎರಡು ದಿನಗಳ ಕ್ರೀಡಾಕೂಟವು ವಿವಿಧ ಸ್ಪರ್ಧೆಗಳನ್ನು ಒಳಗೊಳ್ಳಲಿದೆ. ನೌಕರರಲ್ಲಿ ಹೊಸ ಉತ್ಸಾಹ, ಹುಮ್ಮಸ್ಸು ಮೂಡಿಸಲು ನೆರವಾಗಲಿದೆ ಎಂದು ಹೇಳಿದರು.

ADVERTISEMENT

ರಾಜ್ಯ ಸರ್ಕಾರಿ ನೌಕರರ ಸಂಘವು ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಸರ್ಕಾರಿ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಸರ್ಕಾರಿ ನೌಕರರು ಏನೇ ಸಮಸ್ಯೆಗಳಿದ್ದರೂ ನೇರವಾಗಿ ತಮ್ಮನ್ನು ಭೇಟಿ ಮಾಡಬಹುದು ಎಂದರು.

ಕಳೆದ ವರ್ಷ ಜಿಲ್ಲೆಯಲ್ಲಿ ನೌಕರರ ಕ್ರೀಡಾಕೂಟ ಯಶಸ್ವಿಯಾಗಿ ನೆರವೇರಿಸಲಾಗಿತ್ತು. ಈ ವರ್ಷವೂ ವ್ಯವಸ್ಥಿತವಾಗಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಹೇಳಿದರು.

ಸಂಘವು ಜಿಲ್ಲೆಯ ಅಭಿವೃದ್ಧಿಗಾಗಿ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಜಿಲ್ಲೆಯ ಪ್ರಗತಿಗೆ ಶಕ್ತಿಮೀರಿ ಪ್ರಯತ್ನಿಸುತ್ತಿದ್ದಾರೆ. ನೌಕರರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತಂದಿದ್ದಾರೆ. ವಿದ್ಯುನ್ಮಾನ ಮತಯಂತ್ರ ಬಳಸಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸಿದ್ದಾರೆ ಎಂದು ಹೇಳಿದರು.

ಭಾಲ್ಕಿ, ಬಸವಕಲ್ಯಾಣ, ಚಿಟಗುಪ್ಪ, ಕಮಲನಗರ ಹಾಗೂ ಹುಲಸೂರಿನಲ್ಲಿ ನೌಕರರ ಭವನ ನಿರ್ಮಾಣಕ್ಕೆ ತಲಾ ಒಂದು ಎಕರೆ ಜಮೀನು ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಖಜಾಂಚಿ ಅಶೋಕ ರೆಡ್ಡಿ, ಚಿಟಗುಪ್ಪ ತಾಲ್ಲೂಕು ಘಟಕದ ಅಧ್ಯಕ್ಷ ರಾಜಕುಮಾರ ಬೇಲೂರೆ ಇದ್ದರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ರಾಜಕುಮಾರ ಹೊಸದೊಡ್ಡೆ ಸ್ವಾಗತಿಸಿದರು. ಶಿವಕುಮಾರ ಬಾವಗೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.