ADVERTISEMENT

ಬೀದರ್‌: ಬ್ರಿಮ್ಸ್‌ ಮೇಲ್ದರ್ಜೆಗೇರಿಸಲು ಸರ್ಕಾರದ ಅನುಮೋದನೆ

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸಂತಸ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 11:43 IST
Last Updated 23 ಜುಲೈ 2020, 11:43 IST
ಸಚಿವ ಪ್ರಭು ಚವಾಣ್
ಸಚಿವ ಪ್ರಭು ಚವಾಣ್   

ಬೀದರ್‌: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಆರೋಗ್ಯ ಸೇವೆ ಹೆಚ್ಚು ಬಲಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆ ಅಡಿ ₹ 36 ಕೋಟಿ ಈಗಾಗಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿ ನಿರ್ಮಾಣ ಕಾಮಗಾರಿಯನ್ನು ₹ 7.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ₹ 15.22 ಕೋಟಿ ವೆಚ್ಚದಲ್ಲಿ ಉಪಕರಣಗಳ ಖರೀದಿ ಸೇರಿ ಒಟ್ಟು ₹ 17.50 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ₹ 15.22 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸೀಟುಗಳ ಮಿತಿಯನ್ನು ಈಗಾಗಲೇ 100 ರಿಂದ 150ಕ್ಕೆ ಹೆಚ್ಚಿಸಲಾಗಿದೆ. ಬ್ರಿಮ್ಸ್ ಮೇಲ್ದರ್ಜೆಗೇರಿರುವುದರಿಂದ ಉಪನ್ಯಾಸಕರ ಕೊಠಡಿ, ಆಡಿಟೋರಿಯಂ, ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರ ಹಾಗೂ ಹಾಸ್ಟೆಲ್‌ಗಳ ಉನ್ನತೀಕರಣ ಎಂ.ಸಿ.ಐ ಮಾನದಂಡಗಳ ಪ್ರಕಾರ ಸಂಸ್ಥೆಗಳ ಅವಶ್ಯಕತೆಗಳನ್ನು ಪೂರೈಸುವಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ನೀಡುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಬ್ರಿಮ್ಸ್‌ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ ಅವರೊಂದಿಗೆ ಚರ್ಚೆ ಮಾಡಿದ್ದೆ. ಹಿಂದಿನ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಯವರೊಂದಿಗೆ ಸಮಾಲೋಚನೆ ನಡೆಸಿದ್ದೆ ಎಂದು ತಿಳಿಸಿದ್ದಾರೆ.

ಈ ಭಾಗದ ಜನರ ಆರೋಗ್ಯ ಸೇವೆಗೆ ಒತ್ತುಕೊಟ್ಟು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ ಹಾಗೂ ಸಂಸದ ಭಗವಂತ ಖೂಬಾ ಅವರಿಗೆ ನನ್ನ ಕೃತಜ್ಞತೆಗಳು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.