ಬೀದರ್: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ಮೂರು ದಿನಗಳ ವಸ್ತು ಪ್ರದರ್ಶನಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಜಂಟಿಯಾಗಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅಮೃತರಾವ್ ಚಿಮಕೋಡೆ, ಪಂಚ ಗ್ಯಾರಂಟಿ ಯೋಜನೆಗಳಿಂದ ಜನ ಆರ್ಥಿಕವಾಗಿ ಸಬಲರಾಗಿದ್ದಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ವಿಶೇಷವಾಗಿ ಕಡುಬಡವರು, ಕೂಲಿ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಉಚಿತ ಬಸ್ ಪ್ರಯಾಣದಿಂದ ಮಹಿಳೆಯರು ಧಾರ್ಮಿಕ ಸ್ಥಳಗಳಿಗೆ ಮತ್ತು ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಮಹಿಳೆಯರಿಗೆ ಕುಟುಂಬ ನಿರ್ವಹಣೆ ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ನಿರ್ಮಿಸಿದ ಹೆಣ್ಣು ಮಕ್ಕಳ ವಿಶ್ರಾಂತಿ ಕೋಣೆ ಹಾಗೂ ಮಗುವಿಗೆ ಹಾಲುಣಿಸುವ ಕೋಣೆ ಉದ್ಘಾಟಿಸಿದರು.
ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ, ವಿಭಾಗೀಯ ಸಂಚಾರ ಅಧಿಕಾರಿ ಇಂದ್ರಸೇನ ಎಂ.ಬಿರಾದಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರವೀಣ ಬರಗಲ, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಮೇಶ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ವಿಜಯಕೃಷ್ಣ ಸೋಲಪೂರ, ನರೇಶಕುಮಾರ, ಆಶೀಷ, ತನ್ವೀರ್ ಇಕ್ಬಾಲ್, ನಾಗಶೆಟ್ಟಿ ಇದ್ದರು.
ಗ್ಯಾರಂಟಿಯಿಂದ ಎಷ್ಟು ಜನಕ್ಕೆ ಲಾಭ?:
2023ರ ಜೂನ್ 11ರಿಂದ 2025ರ ಜುಲೈ 9ರ ವರೆಗೆ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 8.64 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಓಡಾಡಿದ್ದಾರೆ. ಇದರಿಂದ ಕೆಕೆಆರ್‌ಟಿಸಿಗೆ ₹248.79 ಕೋಟಿ ಸಂದಾಯವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ತಿಳಿಸಿದರು. ಅನ್ನಭಾಗ್ಯ ಯೋಜನೆಯಡಿ ಪ್ರಸಕ್ತ ಸಾಲಿನ ಜನವರಿ ವರೆಗೆ ಪ್ರತಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ವಿತರಿಸಲಾಗಿದೆ. 5 ಕೆಜಿ ಅಕ್ಕಿಯ ಮೊತ್ತವನ್ನು ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಫೆಬ್ರುವರಿಯಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ ಎಂದು ವಿವರಿಸಿದರು. ಯುವನಿಧಿ ಯೋಜನೆಯಡಿ ಇದುವರೆಗೆ ಡಿಪ್ಲೊಮಾ ಹಾಗೂ ಪದವೀದರ ನಿರುದ್ಯೋಗಿಗಳಿಗೆ ₹20.97 ಕೋಟಿ ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 35.4 ಲಕ್ಷ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದು ಒಟ್ಟು ₹341. 46 ಕೋಟಿ ಜೆಸ್ಕಾಂಗೆ ಸಂದಾಯವಾಗಿದೆ ಎಂದು ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3.60 ಲಕ್ಷ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದು ಮೇ ಅಂತ್ಯದ ವರೆಗೆ ₹1268 ಕೋಟಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.