ADVERTISEMENT

ವಿದ್ಯಾರ್ಥಿನಿಯರ ಸುರಕ್ಷತೆಗೆ ಅಗತ್ಯ ಕ್ರಮ: ಈಶ್ವರ ಖಂಡ್ರೆ

ನೇಹಾ ಪಾಲಕರಿಗೆ ಸಾಂತ್ವನ ಹೇಳಿದ ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 5:03 IST
Last Updated 23 ಏಪ್ರಿಲ್ 2024, 5:03 IST
ಈಶ್ವರ ಬಿ. ಖಂಡ್ರೆ
ಈಶ್ವರ ಬಿ. ಖಂಡ್ರೆ   

ಬೀದರ್‌: ‘ಹುಬ್ಬಳ್ಳಿಯ ಬಿ.ವಿ.ಬಿ ಕಾಲೇಜಿನ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಘಟನೆಯಿಂದ ಪಾಲಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿರುವುದು ನಿಜ. ಸರ್ಕಾರವು ವಿದ್ಯಾರ್ಥಿಗಳು, ಅದರಲ್ಲೂ ವಿದ್ಯಾರ್ಥಿನಿಯರ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

‘ಅಮಾನವೀಯ ಮತ್ತು ಹೇಯ ಕೃತ್ಯವನ್ನು ಈಗಾಗಲೇ ನಾನು ಕಟುವಾದ ಶಬ್ದಗಳಿಂದ ಖಂಡಿಸಿದ್ದೇನೆ. ಈಗಾಗಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ಕೊಡಿಸಲು ತ್ವರಿತ ವಿಚಾರಣೆ ನಡೆಯಬೇಕು. ಇದಕ್ಕೆ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳೇ ಪ್ರಕಟಿಸಿದ್ದಾರೆ’ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನೇಹಾ ಹಿರೇಮಠ ಅವರ ತಂದೆ ನಿರಂಜನ್ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದಾರೆ. ನನಗೆ ಚಿರಪರಿಚಿತರು. ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸಾಂತ್ವನ ಹೇಳಿದ್ದೇನೆ. ಈ ನೋವಿನ ಸಂದರ್ಭದಲ್ಲಿ ನಮ್ಮ ಸಂವೇದನೆ ನಿಮ್ಮ ಕುಟುಂಬದೊಂದಿಗೆ ಇದೆ. ನಾವು ನಿಮ್ಮೊಂದಿಗಿದ್ದೇವೆ. ಮಗಳ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಅವರ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ADVERTISEMENT

ಉನ್ನತ ಶಿಕ್ಷಣ ಸಂಸ್ಥೆಗಳ ಆವರಣದ ಒಳಗೆ ಮತ್ತು ಹೊರಗೆ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಯು.ಜಿ.ಸಿ. ಈಗಾಗಲೇ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಮನವಿ ಮಾಡುವುದಾಗಿ ಖಂಡ್ರೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.