ಬೀದರ್: ‘ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆ ಹಾಕಿಕೊಳ್ಳಲಾಗಿದ್ದು, ಸ್ತ್ರೀಯರಿಗೆ ಆರ್ಥಿಕ ಬಲ ತುಂಬುವ ಕೆಲಸ ಮಾಡಲಾಗುವುದು’ ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಪ್ರಸಕ್ತ ಸಾಲಿಗೆ ಅಂಗನವಾಡಿ ಆರಂಭವಾಗಿ 50 ವರ್ಷ ತುಂಬುತ್ತಿದೆ. ಅಕ್ಟೋಬರ್‌ನಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಸಂಘಗಳ ಘೋಷಣೆ ಮಾಡಿ ಇನ್ನಷ್ಟು ಬಲ ತುಂಬಲಾಗುವುದು. ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿದ್ದು, ಜನರಿಗೆ ತಿಳಿವಳಿಕೆ ಮೂಡಿಸಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ. ಅಧಿಕಾರಿಗಳು ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಬಾಲ್ಯ ವಿವಾಹ ತಡೆಯಲು ಅಧಿಕಾರಿಗಳು ವಿಶೇಷ ಕ್ರಮ ಕೈಗೊಳ್ಳಬೇಕು. ಸ್ವತಃ ಕರೆ ಮಾಡಿ ತನ್ನ ವಿವಾಹವನ್ನು ತಪ್ಪಿಸುವಂತೆ ಅಧಿಕಾರಿಗಳನ್ನು ಕೋರಿದ್ದ ಜಿಲ್ಲೆಯ ಬಾಲಕಿಯನ್ನು ಕರೆಸಿ ಸನ್ಮಾನಿಸಬೇಕು. ಜೊತೆಗೆ ಆರ್ಥಿಕ ಸಹಾಯ ಮಾಡಬೇಕು. ಇದರಿಂದ ಬೇರೆಯವರಿಗೂ ಕೂಡ ಸಹಾಯವಾಗುತ್ತದೆ ಎಂದರು.
ಎಲ್ಲಾ ಇಲಾಖೆಗಳು ಕೈಜೋಡಿಸಿದಾಗ ಅನಿಷ್ಠ ಪದ್ಧತಿಗಳನ್ನು ತಡೆಯಲು ಸಾಧ್ಯ. ಜಾಗೃತಿ ಮೂಡಿಸುವುದರ ಜತೆ ಕಠಿಣ ಕ್ರಮದ ಮೂಲಕ ಭಯ ಹುಟ್ಟಿಸಿದರೆ ಅನಿಷ್ಠ ಪದ್ಧತಿ ನಿಲ್ಲಲು ಸಾಧ್ಯ. ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಲೇಬೇಕು. ಇಲಾಖೆ ಯೋಜನೆಗಳ ಅನುಷ್ಠಾನದಲ್ಲಿ ಹಿಂದೆ ಬಿದ್ದಲ್ಲಿ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಬಿ.ಎಚ್.ನಿಶ್ಚಲ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ‍್ಯವಂಶಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.