ADVERTISEMENT

ಸೇವೆ ಕಾಯಂಗೊಳಿಸಲು ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 11:22 IST
Last Updated 24 ಡಿಸೆಂಬರ್ 2021, 11:22 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೀದರ್‌ ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಉಪನ್ಯಾಸಕರು ಬೀದರ್‌ನ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೀದರ್‌ ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಉಪನ್ಯಾಸಕರು ಬೀದರ್‌ನ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ಬೀದರ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೀದರ್‌ ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಶುಕ್ರವಾರ ಉಪನ್ಯಾಸಕರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,500 ಅತಿಥಿ ಉಪನ್ಯಾಸಕರು ಕನಿಷ್ಠ ಗೌರವ ಧನವಾಗಿ ಕೇವಲ ₹11 ಸಾವಿರ ಹಾಗೂ ₹ 13 ಸಾವಿರ ಪಡೆದು ಎರಡು ದಶಕಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶೇಕಡ 80ರಷ್ಟು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದರೆ,ಶೇಕಡ 20ರಷ್ಟು ಬೋಧಕ ಸಿಬ್ಬಂದಿ ಇದ್ದಾರೆ. ಸರ್ಕಾರ ಅತಿಥಿ ಉಪನ್ಯಾಸಕರನ್ನು ಆಧುನಿಕ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರ ಹಸಿವು, ನೋವು ಮತ್ತು ಬಡತನ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಪಶ್ಚಿಮ ಬಂಗಾಳ, ಹರಿಯಾಣ, ದೆಹಲಿ, ಕೇರಳ ಹಾಗೂ ಪಂಜಾಬ್ ಮಾದರಿಯಲ್ಲಿ ರಾಜ್ಯದ ಅತಿಥಿ ಉಪನ್ಯಾಸಕರಿಗೂ ಸೌಲಭ್ಯ ಕೊಡಬೇಕು ಎಂದು ಒತ್ತಾಯಿಸಿದರು.

ADVERTISEMENT

ರಾಜ್ಯ ಸರ್ಕಾರ 1982, 1992, 1996 ಹಾಗೂ 2003ಲ್ಲಿ ಅರೆಕಾಲಿಕ ಉಪನ್ಯಾಸಕರನ್ನು ಕಾಯಂ ಮಾಡಿದ ನಿದರ್ಶನಗಳಿವೆ. ಅದೇ ಮಾದರಿಯಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನೂ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಗಮನ ಸೆಳೆಯಲು ಡಿಸೆಂಬರ್ 10ರಿಂದ ಧಾರವಾಡದಲ್ಲಿ ಅನಿರ್ದಿಷ್ಟ ಕಾಲದವರೆಗೆ ಆಹೋರಾತ್ರಿ ಧರಣಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ. ಡಿ.16ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಮುಷ್ಕರ ನಡೆಸಲಾಗಿದೆ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಚಳಿಗಾಲದ ಅಧಿವೇಶನದಲ್ಲೇ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ಅತಿಥಿ ಉಪನ್ಯಾಸಕರು ಬ್ಯಾನರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ನಂತರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಸಿಂಧೆ ಹಾಗೂ ಉಪಾಧ್ಯಕ್ಷ ಚಂದ್ರಕಾಂತ ನಾರಾಯಣಪೂರ ಅವರು ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲ, ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿಪತ್ರವನ್ನು ಸಲ್ಲಿಸಿದರು.

ಪ್ರಧಾನ ಕಾರ್ಯದರ್ಶಿ ಬಸವರಾಜ ಸೇರಿ, ಕಾರ್ಯದರ್ಶಿ ಧನರಾಜ ತುಡಮೆ, ಕೋಶಾಧ್ಯಕ್ಷ ಬಾಲಾಜಿ ಬುದ್ರಪವಾಡೆ, ಘಟನಾ ಕಾರ್ಯದರ್ಶಿಗಳಾದ ಬಂಡಯ್ಯ ಸ್ವಾಮಿ, ಪಂಡಿತ ಗಂಗಶೆಟ್ಟಿ, ನರಸಪ್ಪ ಕುತ್ತಾಬಾದ್, ವಿಷ್ಣುವರ್ಧನ್, ವೀರಯ್ಯಸ್ವಾಮಿ ಮಠಪತಿ, ಶರಣಪ್ಪ ಬಗದುರ್ಗೆ, ಶಿವಲೀಲಾ ಮಠಪತಿ, ಶಿವಲೀಲಾ ಪಾಟೀಲ, ಜಗದೇವಿ ತಿಬಶೆಟ್ಟಿ. ವನಿತಾ ಭಾಂಗೆ, ಶಾಲಿನಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.