ADVERTISEMENT

ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 12:58 IST
Last Updated 19 ಸೆಪ್ಟೆಂಬರ್ 2021, 12:58 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೀದರ್‌ನ ಅಂಬೇಡ್ಕರ್‌ ವೃತ್ತದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೀದರ್‌ನ ಅಂಬೇಡ್ಕರ್‌ ವೃತ್ತದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು   

ಬೀದರ್‌: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ನಗರದ ಅಂಬೇಡ್ಕರ್‌ ವೃತ್ತದಲ್ಲಿ ಈಚೆಗೆ ಪ್ರತಿಭಟನೆ ನಡೆಸಿದರು.

ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 14,447 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ₹ 2 ಸಾವಿರ ರೂಪಾಯಿ ವೇತನದಿಂದ ಅತಿಥಿ ಉಪನ್ಯಾಸಕ ವೃತ್ತಿಯನ್ನು ಪ್ರಾರಂಭಿಸಿ ನಿರಂತರವಾಗಿ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

15 ವರ್ಷಗಳ ನಿರಂತರ ಹೋರಾಟದ ಫಲವಾಗಿ ಪ್ರಸ್ತುತ ₹ 11 ಸಾವಿರದಿಂದ ₹ 13 ಸಾವಿರ ವೇತನ ನಿಗದಿ ಮಾಡಿದರೂ 3 ತಿಂಗಳಿಗೊಮ್ಮೆ 6 ತಿಂಗಳಿಗೊಮ್ಮೆ ವೇತನ ಕೊಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಯಾವುದೇ ಪಕ್ಷ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ದೂರಿದರು.

ADVERTISEMENT

ಪಶ್ಚಿಮ ಬಂಗಾಳ, ಹರಿಯಾಣ, ಕೇರಳ, ಆಂಧ್ರಪ್ರದೇಶ, ದೆಹಲಿ ರಾಜ್ಯಗಳಲ್ಲಿ ₹ 40 ಸಾವಿರದಿಂದ ₹ 50 ಸಾವಿರ ವೇತನ 12 ತಿಂಗಳು ಕೊಟ್ಟು ಸೇವಾ ಭದ್ರತೆಯನ್ನು ಒದಗಿಸಿ ಗೌರವಯುತವಾಗಿ ಬದುಕಲು ಅವಕಾಶ ಮಾಡಿ ಕೊಡಲಾಗಿದೆ. ಕರ್ನಾಟಕದಲ್ಲಿ ಅತಿಥಿ ಉಪನ್ಯಾಸಕರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಆರ್ಥಿಕ ಸಮಸ್ಯೆಯಿಂದ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ 163 ಜನ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಈ ಹಿಂದೆ ಅತಿಥಿ ಉಪನ್ಯಾಸಕರಿಗೆ ಒಂದು ಶೈಕ್ಷಣಿಕ ಅವಧಿಗೆ ನೇಮಕ ಮಾಡಿಕೊಂಡು ಕನಿಷ್ಠ 10 ತಿಂಗಳ ಗೌರವಧನ ಕೊಡುತ್ತಿದ್ದರು. ಆದರೆ, ಕೋವಿಡ್ ಸಂಕಷ್ಟದ ಅವಧಿಯಲ್ಲಿ ಮೂರು ತಿಂಗಳು ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಪದವಿ ಕಾಲೇಜುಗಳು ಸಂಪೂರ್ಣವಾಗಿ ಅತಿಥಿ ಉಪನ್ಯಾಸಕರನ್ನು ಅವಲಂಬಿತವಾಗಿವೆ. ಪ್ರಸ್ತುತ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಘೋಷಣೆ ಮಾಡಿ 12 ತಿಂಗಳು ವೇತನದೊಂದಿಗೆ ಪಿಎಫ್‌ ಹಾಗೂ ಇಎಸ್‌ಐ ಸೌಲಭ್ಯ ಒದಗಿಸಬೇಕು. ಮಹಿಳಾ ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು. ಅತಿಥಿ ಉಪನ್ಯಾಸಕರ ಸೇವೆಯನ್ನು ಹಂತ ಹಂತವಾಗಿ ಸೇವಾ ಸಕ್ರಾಮತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ನಂತರ ಡಾ.ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಬಂದು ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿ ಡಾಂಗೆ, ಉಪಾಧ್ಯಕ್ಷ ಧನರಾಜ್ ಟೋಕರೆ, ಕಾರ್ಯದರ್ಶಿ ಬಂಡಯ್ಯ ಸ್ವಾಮಿ ಪ್ರತಿಭಟನಾಕಾರರ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.