ಬೀದರ್: ‘ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಶುಲ್ಕ ವಿಧಿಸಿ ವಿದ್ಯಾರ್ಥಿಗಳ ಪೋಷಕರನ್ನು ಸಂಕಷ್ಟಕ್ಕೆ ದೂಡಿದ್ದು, ಅವುಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೂನ್ 5ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ಹೆಚ್ಚಿಸಿರುವುದರಿಂದ ಬಡ ಹಾಗೂ ಮಧ್ಯಮ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನು ನಿಯಂತ್ರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸರ್ಕಾರಿ ಶಾಲಾ–ಕಾಲೇಜುಗಳನ್ನು ಕಟ್ಟಿಸಿದೆ. ಆದರೆ, ಅಲ್ಲಿ ಪರಿಣಾಮಕಾರಿ ಬೋಧನೆ ಆಗುತ್ತಿಲ್ಲ. ಸರ್ಕಾರಿ ಶಾಲೆಗಳ ಶಿಕ್ಷಕರು ತಮ್ಮ ಬದಲಾಗಿ ಬೇರೊಬ್ಬರನ್ನು ತರಗತಿಗೆ ಕಳಿಸಿ, ಅವರು ಡಿಡಿಪಿಐ ಕಚೇರಿ ಎದುರು ಹರಟೆ ಹೊಡೆಯುತ್ತಿದ್ದಾರೆ. ಈ ಕಾರಣದಿಂದ ಪೋಷಕರು ಖಾಸಗಿ ಶಾಲಾ–ಕಾಲೇಜುಗಳ ಮೊರೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಖಾಸಗಿಯವರು ಮನಬಂದಂತೆ ಶುಲ್ಕ ಹೆಚ್ಚಿಸಿದ್ದಾರೆ. ಇದರಿಂದ ಪೋಷಕರು ಸಾಲ ಮಾಡಿ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದರು.
ಬಡ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಜೀವ ಹಿಂಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಲಗಾಮು ಹಾಕಬೇಕು. ಡಿಡಿಪಿಐ ಹಾಗೂ ಡಿಡಿಪಿಯು ಅವರು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಇದೇ ಖಾಸಗಿ ಶಿಕ್ಷಣ ಸಂಸ್ಥೆಗಳವರು ಈ ಹಿಂದೆ ಇಂಗ್ಲಿಷ್ ಭಾಷೆಯಲ್ಲಿ ನಾಮಫಲಕ ಅಳವಡಿಸಿ ಕನ್ನಡಿಗರಿಗೆ ಮುಜುಗರ ಉಂಟು ಮಾಡಿದ್ದರು. ಇದರ ವಿರುದ್ಧ ರಕ್ಷಣಾ ವೇದಿಕೆ ಪ್ರತಿಭಟಿಸಿತ್ತು. ಇದನ್ನು ಸಹಿಸದೇ ಕೆಲವು ಶಕ್ತಿಗಳು ನಮ್ಮ ವಿರುದ್ಧ ಮೊಕದ್ದಮೆ ಹೂಡಿದ್ದವು. ಆದರೆ, ಕನ್ನಡದ ನೆಲ, ಜಲ ಸಂರಕ್ಷಣೆಗಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಅನಧಿಕೃತ ಕೋಚಿಂಗ್ ಸೆಂಟರ್‌ಗಳ ಹಾವಳಿ ಕೂಡ ಹೆಚ್ಚಾಗಿದೆ. ಅದನ್ನು ಕೂಡ ತಡೆಯಬೇಕಿದೆ. ಜಿಲ್ಲಾಡಳಿತ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಗೌಡ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಬಂಡೆಪ್ಪ ಕರಿಬಸಣ್ಣ, ಬೀದರ್ ದಕ್ಷಿಣ ಕ್ಷೇತ್ರದ ಅಧ್ಯಕ್ಷ ವೀರಶೆಟ್ಟಿ ಗೌಸಪುರೆ, ಜಿಲ್ಲಾ ಉಪಾಧ್ಯಕ್ಷರಾದ ಸೋಮಶೇಖರ ಸಜ್ಜನ್, ಶಿವರುದ್ರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.