ADVERTISEMENT

ಹುಮನಾಬಾದ್ | ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಿ: ಡಾ. ಸಿದ್ದಲಿಂಗಪ್ಪ ಪಾಟೀಲ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 4:46 IST
Last Updated 20 ಜನವರಿ 2026, 4:46 IST
ಹುಮನಾಬಾದ್ ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಮಾತನಾಡಿದರು
ಹುಮನಾಬಾದ್ ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಮಾತನಾಡಿದರು   

ಹುಮನಾಬಾದ್: ಪಟ್ಟಣದ ಐತಿಹಾಸಿಕ ವೀರಭದ್ರೇಶ್ವರ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಹೇಳಿದರು‌.

ಪಟ್ಟಣದ ಶಾಸಕರ ಭವನದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹುಮನಾಬಾದ್ ವೀರಭದ್ರೇಶ್ವರ ದೇವಸ್ಥಾನದ ಜಾತ್ರೆ ದೊಡ್ಡ ಮಟ್ಟದಲ್ಲಿ ಆಚರಣೆ ನಡೆಯುತ್ತಿದೆ. ಪುರಸಭೆ ಅವರು ಪಟ್ಟಣದ ಸ್ವಚ್ಚತೆಗೆ ಪ್ರಮುಖ ಆದ್ಯತೆ ನೀಡಬೇಕು. ನೀರಿನ ಕೊರತೆ ಆಗಬಾರದು. ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಬೇಕು ಎಂದರು.

ADVERTISEMENT

ಜೆಸ್ಕಾಂನವರು ವಿದ್ಯುತ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಪಟ್ಟಣದ ಪ್ರಮುಖ ರಸ್ತೆಯ ಮೂರ್ನಾಲ್ಕು ಕಡೆಯಲ್ಲಿ ಆರೋಗ್ಯ ತಪಾಸಣೆ ಮತ್ತು ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ವ್ಯವಸ್ಥೆ ಸಹ ಮಾಡಿಕೊಳ್ಳಬೇಕು. ಸಾರಿಗೆ ಇಲಾಖೆ ಅವರು ಹುಮನಾಬಾದ್‌ನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ದೇವಸ್ಥಾನದ ಮತ್ತು ಅಗ್ನಿಕುಂಡದ ಹತ್ತಿರ ಹುಮನಾಬಾದ್ ಪೊಲೀಸ್ ಠಾಣೆಯ ಸಿಬ್ಬಂದಿ ನಿಯೋಜನೆ ಮಾಡಬೇಕೆಂದು ಸೂಚಿಸಿದರು.‌

ತಹಶೀಲ್ದಾರ್ ಅಂಜುಂ ತಬಸುಮ್ ಮಾತನಾಡಿ, ‘ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಹ ಜಾತ್ರಾ ಸಂದರ್ಭದಲ್ಲಿ ‌ ನಿಯೋಜನೆ ಮಾಡಲಾಗಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ವನಿತಾಬಾಯಿ ಮಾತನಾಡಿ, ಜಾತ್ರಾ ಮಹೋತ್ಸವ ನಿಮಿತ್ತ 25 ಜನರನ್ನು ಹೊರ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ. ಬೀದಿ ದೀಪಗಳು ಈಗಾಗಲೇ ಅಳವಡಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದಿಪೀಕಾ ನಾಯ್ಕರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ಸಿದ್ದೇಶ್ವರ, ಲೋಕೋಪಯೋಗಿ ಎಇಇ ವೆಂಕಟೇಶ್ ಶಿಂಧೆ ಸೇರಿದಂತೆ ಇತರರು ಇದ್ದರು.‌

‘ಅಕ್ರಮ ಚಟುವಟಿಕೆ ತಡೆಯಿರಿ’ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಕೆಲವರು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.‌ ಅಂತಹವರಿಗೆ ಪೊಲೀಸರು ಅವಕಾಶ ನೀಡಬಾರದು ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಸೂಚಿಸಿದರು. ಲಾಟರಿ (ತಿತಲಿ ಹಂಚುವುದು) ಜೂಜಾಟ ನಡೆಸುತ್ತಾರೆ ಅಂತವರು ಕಂಡು ಬಂದರೆ ತಕ್ಷಣ ಕ್ರಮ ಕೈಗೊಳ್ಳಬೇಕು. ಪ್ರತಿ ವರ್ಷ ಜಾತ್ರೆಯಲಿ ಕಳ್ಳರ ಮತ್ತು ಪುಂಡಪೋಕರಿಗಳ ಹಾವಳಿ ಹೆಚ್ಚಾಗುತ್ತಿದೆ. ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿಕೊಂಡು ಪೊಲೀಸರು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.