ADVERTISEMENT

ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ನಾನಲ್ಲ: ನಳೀನಕುಮಾರ ಕಟೀಲ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 13:52 IST
Last Updated 15 ಜುಲೈ 2021, 13:52 IST
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಗುರುವಾರ ಬೀದರ್‍ನ ನೌಬಾದ್‍ನಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಬಿಜೆಪಿ ಜಿಲ್ಲಾ ಘಟಕದ ಕಟ್ಟಡ ಕಾಮಗಾರಿ ವೀಕ್ಷಿಸಿದರು
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಗುರುವಾರ ಬೀದರ್‍ನ ನೌಬಾದ್‍ನಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಬಿಜೆಪಿ ಜಿಲ್ಲಾ ಘಟಕದ ಕಟ್ಟಡ ಕಾಮಗಾರಿ ವೀಕ್ಷಿಸಿದರು   

ಬೀದರ್: ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ನಾನಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಹೇಳಿದರು.

ನಗರದ ನೌಬಾದ್‍ನಲ್ಲಿ ನಿರ್ಮಿಸುತ್ತಿರುವ ಬಿಜೆಪಿ ಜಿಲ್ಲಾ ಘಟಕದ ಕಟ್ಟಡ ಕಾಮಗಾರಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಪಕ್ಷ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಂಥ ಉನ್ನತ ಹುದ್ದೆ ನೀಡಿದೆ. ಹುದ್ದೆಗೆ ಅಪೇಕ್ಷೆ ಪಡುವವನಲ್ಲ. ಪಕ್ಷದ ಸಂಘಟನಾ ಜವಾಬ್ದಾರಿ ಹೊತ್ತುಕೊಂಡಿರುವುದೇ ಹೆಮ್ಮೆಯ ವಿಷಯವಾಗಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ADVERTISEMENT

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುವ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಆದರೆ, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವವರು ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಶಾಸಕಾಂಗ ಪಕ್ಷ ಎನ್ನುವುದನ್ನು ಅವರು ಅರಿಯಬೇಕು ಎಂದು ಸಲಹೆ ಮಾಡಿದರು.

ಖರ್ಗೆ ಹೆಸರು ಘೋಷಿಸಲಿ:


ಕಾಂಗ್ರೆಸ್‍ನಲ್ಲಿ ದಲಿತ ಮುಖ್ಯಮಂತ್ರಿ ಚರ್ಚೆ ಶುರುವಾಗಿದೆ. ತಾಕತ್ತಿದ್ದರೆ ಆ ಪಕ್ಷ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಘೋಷಿಸಲಿ ಎಂದು ಸವಾಲು ಎಸೆದರು.

ಸರ್ಕಾರದ ಅವಧಿ ಇನ್ನೂ ಎರಡು ವರ್ಷ ಇದೆ. ಆಗಲೇ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಯ ಮ್ಯೂಸಿಕಲ್ ಚೇರ್ ಆಟ ಪ್ರಾರಂಭವಾಗಿದೆ. ಮುಂದಿನ ಮುಖ್ಯಮಂತ್ರಿ ವಿಚಾರವು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಗುಂಪುಗಾರಿಕೆಗೆ ಕಾರಣವಾಗಿದೆ. ಬೀದಿ ಜಗಳವಾಗಿಯೂ ಮಾರ್ಪಟ್ಟಿದೆ. ನಾನು-ನೀನು ಎನ್ನುವುದಕ್ಕಿಂತ ಖರ್ಗೆ ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಕಿವಿಮಾತು ಹೇಳಿದರು.

ಹೇಳುವುದು ಒಂದು, ಮಾಡುವುದು ಇನ್ನೊಂದು ಇದು ಸಿದ್ದರಾಮಯ್ಯ ಅವರ ಚಾಳಿಯಾಗಿದೆ. ಹಿಂದೆ ಅವರು ಅಹಿಂದ ಚಳವಳಿ ನಡೆಸಿದ್ದರು. ನಂತರ ಆ ಸಮಾಜದವರನ್ನು ಮರೆತು ಹೋದರು. ಅನಂತರ ದಲಿತ ಮುಖ್ಯಮಂತ್ರಿಗೆ ತಮ್ಮ ಬೆಂಬಲ ಇದೆ ಎಂದು ಹೇಳಿ ಪರಮೇಶ್ವರ ಅವರನ್ನು ಪರಾಭವಗೊಳಿಸುವ ಕೆಲಸ ಮಾಡಿದರು ಎಂದು ಟೀಕಿಸಿದರು.

ಸಿದ್ದರಾಮಯ್ಯ ತಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ನಾಟಕ ಮಾಡುತ್ತ ಇರುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್‍ನಲ್ಲಿ ಅಸಮಾಧಾನಗೊಂಡವರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಅವರಿಗೆ ಸ್ವಾಗತ ಕೋರುತ್ತೇವೆ ಎಂದು ತಿಳಿಸಿದರು.

ಬರುವ ದಿನಗಳಲ್ಲಿ ವಿಧಾನ ಪರಿಷತ್, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿವೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ತಂತ್ರಗಾರಿಕೆ, ಸಂಘಟನಾತ್ಮಕ ಚಟುವಟಿಕೆ ಸೇರಿದಂತೆ ಅಗತ್ಯ ತಯಾರಿಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ಅತಿ ಹೆಚ್ಚು ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಟ್ಟಡ ಕಾಮಗಾರಿ ಪರಿಶೀಲನೆ:
ಕಟೀಲ್ ಅವರು ಇದಕ್ಕೂ ಮುನ್ನ ಬಿಜೆಪಿ ಜಿಲ್ಲಾ ಘಟಕದ ನೂತನ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿದರು. ಮುಖಂಡರಿಂದ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಶಾಸಕ ಶರಣು ಸಲಗರ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಮುಖಂಡರಾದ ಗುರುನಾಥ ಕೊಳ್ಳೂರ, ಈಶ್ವರಸಿಂಗ್ ಠಾಕೂರ್, ಅಶೋಕ ಹೊಕ್ರಾಣೆ, ಗುರುನಾಥ ಜ್ಯಾಂತಿಕರ್, ಹಣಮಂತ ಬುಳ್ಳಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.