ಹುಮನಾಬಾದ್: ಸಮೀಪದ ಚಿಟಗುಪ್ಪ ಪಟ್ಟಣ ದಿನದಿಂದ ದಿನಕ್ಕೆ ವ್ಯಾಪಕವಾಗಿ ಬೆಳೆಯುತ್ತಿದ್ದು, ಪಟ್ಟಣದಲ್ಲಿ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಪರಿಣಾಮ ವಾಹನ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ.
ಇಲ್ಲಿಯ ಪ್ರಮುಖ ರಸ್ತೆಗಳಲ್ಲಿ ವಾಹನಗಳು ಅಡ್ಡಾದಿಡ್ಡಿ ಸಂಚಾರ ಹಾಗೂ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಯಿಂದಾಗಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಂಬಂಧಿಸಿದ ಪೊಲೀಸ್ ಹಾಗೂ ಸ್ಥಳೀಯ ಆಡಳಿತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡಲು ಪುರಸಭೆ ಅಧಿಕಾರಿಗಳು ಹಾಗೂ ಪೊಲೀಸರೇ ನಿರ್ಲಕ್ಷ್ಯ ಕಾರಣ. ರಸ್ತೆಗಳ ಪಕ್ಕದಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲ್ಲಿಸಿ ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಜನರು ದೂರುತ್ತಿದ್ದಾರೆ.
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನಿತ್ಯ ಸಾವಿರಾರು ಮಂದಿ ವಾಹನಗಳಲ್ಲಿ ಪಟ್ಟಣಕ್ಕೆ ಬರುತ್ತಾರೆ. ಆದರೆ ಅವರ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆಯಿಲ್ಲ. ಪಾದಚಾರಿ ಮಾರ್ಗವನ್ನು ಅಂಗಡಿ ಮಾಲೀಕರು ಒತ್ತುವರಿ ಮಾಡಿಕೊಂಡರೆ, ಕೆಲವೆಡೆ ವಾಹನ ನಿಲುಗಡೆ ಸ್ಥಳವನ್ನೂ ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದಾರೆ.
ಪಟ್ಟಣದ ಪ್ರಮುಖ ವೃತ್ತಗಳಾದ ಶಿವಾಜಿ ವೃತ್ತ, ಸ್ವಾತಂತ್ರ್ಯ ಹೋರಾಟಗಾರ ಬಸವರಾಜ ವೃತ್ತದಿಂದ ಗಾಂಧಿ ವೃತ್ತ, ಜವಾಹರಲಾಲ್ ನೆಹರು ವೃತ್ತದ ಮಾರ್ಗವಾಗಿ ತಾಲ್ಲೂಕು ಪಂಚಾಯಿತಿ ಕಚೇರಿಗೆ ತೆರಳುವ ರಸ್ತೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುತ್ತಿರುವುದರಿಂದ ಪಾದಚಾರಿಗಳಿಗೆ ಸಂಚಾರ ರಸ್ತೆಯೇ ಇಲ್ಲದಂತಾಗಿ ರಸ್ತೆಯ ಮಧ್ಯ ಭಾಗದಲ್ಲಿ ಸಂಚರಿಸುವಂತಾಗಿದೆ.
ಪಟ್ಟಣದಲ್ಲಿ ಪೊಲೀಸರು ಇದ್ದೂ ಇಲ್ಲದಂತಾಗಿದೆ. ಎಲ್ಲೆಂದರಲ್ಲಿ ವಾಹನಗಳನ್ನು ಓಡಿಸುವುದು, ಪಾದಚಾರಿ ಮಾರ್ಗದಲ್ಲಿ ವಾಹನಗಳನ್ನು ನಿಲ್ಲಿಸುವುದು. ಬೇಕಾ ಬಿಟ್ಟಿಯಾಗಿ ಪಾರ್ಕಿಂಗ್ ಮಾಡುವುದು. ರಸ್ತೆ ಮಧ್ಯದಲ್ಲಿಯೇ ತಳ್ಳು ಬಂಡಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತ ನಿಲ್ಲುವುದು ನಡೆದೇ ಇದೆ. ಪಟ್ಟಣದ ಬಹುತೇಕ ಅಂಗಡಿ ಹಾಗೂ ಮನೆ ಮಾಲೀಕರು ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಪಾದಚಾರಿಗಳಿಗೆ ಮಾರ್ಗವೇ ಇಲ್ಲದಂತಾಗಿದೆ. ಇದರಿಂದ ಸಂಚಾರಕ್ಕೆ ರಸ್ತೆ ಮೇಲೆ ಸ್ಥಳವಿಲ್ಲದಂತಾಗಿದೆ.
ಶಾಲಾ ಕಾಲೇಜು ಆರಂಭ ಹಾಗೂ ಬಿಡುವ ಸಮಯದಲ್ಲಿ ಕೆಲ ಯುವಕರು ನಿಯಮ ಮೀರಿ ಭಾರಿ ಶಬ್ಧಗಳೊಂದಿಗೆ ಬೈಕ್‌ಗಳಲ್ಲಿ ತೆರಳುತ್ತಾರೆ. ಬೈಕ್ ಸವಾರರು, ಮಹಿಳೆಯರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇದರಿಂದ ತುಂಬಾ ಕಿರಿಕಿರಿಯಾಗುತ್ತಿದೆ. ಇಂತಹವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣದ ನಿವಾಸಿಗಳು ಆಗ್ರಹಿಸಿದ್ದಾರೆ.
ಅಂಗಡಿ ಮತ್ತು ಮನೆ ನಿರ್ಮಾಣಕ್ಕೆ ಪುರಸಭೆ ಅಧಿಕಾರಿಗಳು ಪರವಾನಗಿ ನೀಡುವುದಷ್ಟೇ ಕೆಲಸವಾಗಿದೆ. ಆ ಕಟ್ಟಡ ನಿರ್ಮಾಣ ಮಾಡುವಾಗ ರಸ್ತೆ ಮತ್ತು ಚರಂಡಿಗಳು ಒತ್ತುವರಿ ಆಗಿದೆಯೇ ಎಂದು ಅಧಿಕಾರಿಗಳು ಪರಿಶೀಲಿಸುತ್ತಿಲ್ಲ. ಕೆಲ ಅಂಗಡಿ ಮತ್ತು ಮನೆಯ ಮಾಲೀಕರು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ಸಂಚರಿಸುವ ಸ್ಥಿತಿ ಇದೆ ಎಂದು ಇಲ್ಲಿಯ ನಿವಾಸಿಗಳು ದೂರುತ್ತಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಲಾಗುತ್ತಿದೆ. ಸಂಬಂಧಪಟ್ಟ ಇಲಾಖೆಯಿಂದ ವಾಹನ ನಿಲುಗಡೆಗೆ ಸ್ಥಳ ಗುರುತಿಸಬೇಕು. ರಸ್ತೆ ಪಕ್ಕದಲ್ಲಿ ವಾಹನ ನಿಲುಗಡೆಗೆ ನಾಮಫಲಕ ಅಳವಡಿಸಿ ಜಾಗೃತಿ ಮೂಡಿಸಬೇಕು.
-ವೀರೇಶ್ ತುಗಾಂವ ಚಿಟಗುಪ್ಪ ಮುಖಂಡ
ಪಟ್ಟಣದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಇದೆ. ಇಲ್ಲಿ ಬಹುತೇಕ ಕಡೆ ಪುಟ್‌ಪಾತ್ ಒತ್ತುವರಿ ಆಗಿದ್ದರಿಂದ ಪಾದಚಾರಿಗಳಿಗೆ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಸಂಬಂಧಪಟ್ಟವರು ಒತ್ತುವರಿ ಸ್ಥಳವನ್ನು ತೆರವು ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.
-ದತ್ತು ಚಿಟಗುಪ್ಪ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.