ADVERTISEMENT

ಕೋವಿಡ್ ಲಸಿಕೆಯ ಗುರಿ ಸಾಧಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 15:07 IST
Last Updated 20 ಅಕ್ಟೋಬರ್ 2021, 15:07 IST
ಸಚಿವ ಪ್ರಭು ಚವಾಣ್
ಸಚಿವ ಪ್ರಭು ಚವಾಣ್   



ಬೀದರ್‌: ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಗುರಿಯನ್ನು ನವೆಂಬರ್ ಒಳಗಾಗಿ ಸಾಧಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಂದಾಯ ಇಲಾಖೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಪ್ರತಿ ಹಳ್ಳಿಯಲ್ಲಿಯೂ ಅಭಿಯಾನದ ಮಾದರಿಯಲ್ಲಿ ಲಸಿಕೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ತಜ್ಞರು ಕೋವಿಡ್ 3ನೇ ಅಲೆಯ ಬಗ್ಗೆ ಎಚ್ಚರಿಕೆ ನೀಡಿರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯಲ್ಲಿ ಈವರೆಗೆ ಮೊದಲ ಡೋಸ್ ಶೇ 73ರಷ್ಟು ಹಾಗೂ 2ನೇ ಡೋಸ್ ಶೇ 50 ರಷ್ಟು ಪ್ರಗತಿಯಾಗಿದೆ. ಗ್ರಾಮೀಣ ಭಾಗದಲ್ಲಿ ಲಸಿಕೆಯ ಬಗ್ಗೆ ಜನರಲ್ಲಿ ಇನ್ನು ಗೊಂದಲಗಳಿವೆ. ಲಸಿಕೆಯ ಮಹತ್ವದ ಬಗ್ಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಕೋವಿಡ್ ಸೋಂಕು ತಡೆಗೆ ಲಸಿಕೆಯೇ ಸಂಜೀವಿನಿಯಾಗಿದೆ. ಜಿಲ್ಲೆಯಲ್ಲಿ ಲಸಿಕೆಗೆ ಕೊರತೆಯಿಲ್ಲ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದು ರೋಗ ನಿಯಂತ್ರಣಕ್ಕೆ ಸರ್ಕಾರದ ಕೈ ಜೋಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವಿಷಯದಲ್ಲಿ ಬಹಳಷ್ಟು ಜಾಗೃತಿ ಮೂಡಿಸುತ್ತಿದ್ದಾರೆ.

ದೇಶದಲ್ಲಿ ಈವರೆಗೆ ನೂರು ಕೋಟಿ ಜನರು ಲಸಿಕೆ ಪಡೆದಿರುವುದು ದೊಡ್ಡ ಸಾಧನೆ. ಬೀದರ ಜಿಲ್ಲೆಯೂ ಲಸಿಕೆ ನೀಡುವಲ್ಲಿ ಮೊದಲ ಸ್ಥಾನದಲ್ಲಿರಬೇಕೆಂಬುದು ನನ್ನ ಆಶಯವಾಗಿದೆ. ಅರ್ಹರೆಲ್ಲರೂ ವಿಳಂಬ ಮಾಡದೇ ಲಸಿಕೆ ಪಡೆಯಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.